ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ ಏಪ್ರಿಲ್ 26ರಂದು ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬುಧವಾರ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.
ಈಗಾಗಲೇ ಪ್ರಚಾರದ ಭರಾಟೆ ಮುಗಿಲು ಮುಟ್ಟಿದ್ದು, ಮತದಾರರನ್ನು ಒಲೈಸಿಕೊಳ್ಳಲು ನಾಯಕರು ನಾನಾ ಕಸರತ್ತು ನಡೆಸಿದ್ದಾರೆ. ಬಹಿರಂಗ ಸಭೆ, ಸಮಾವೇಶ, ಕಾರ್ಯಕರ್ತರ ಸಭೆ, ಮನೆ ಮನೆ ಭೇಟಿ ಸೇರಿ ಹಲವು ಮಾರ್ಗಗಳ ಮೂಲಕ ಮತದಾರರನ್ನು ತಲುಪಿರುವ ಅಭ್ಯರ್ಥಿಗಳು ಕೊನೆಯ ದಿನದ ಪ್ರಚಾರದ ಜೊತೆಗೆ ಕೊನೆ ಕ್ಷಣದ ಗೆಲುವಿನ ಕಾರ್ಯತಂತ್ರ ರೂಪಿಸಿದ್ದಾರೆ.
ರಾಜ್ಯದಲ್ಲಿ ಮೊದಲ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯುವ 14 ಕ್ಷೇತ್ರಗಳಲ್ಲಿ ಮಾರ್ಚ್ 28 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿತ್ತು. ಅದಕ್ಕಿಂತ ಮೊದಲೇ ಭರ್ಜರಿ ಪ್ರಚಾರ ನಡೆಸಿದ ರಾಜಕೀಯ ಪಕ್ಷಗಳು ಚುನಾವಣೆಯ ಕಾವು ಏರಿಸಿದ್ದವು. 11 ಕ್ಷೇತ್ರಗಳಲ್ಲಿ ಕಾಂಗ್ರೆಸ್- ಬಿಜೆಪಿ, ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ -ಜೆಡಿಎಸ್ ನಡುವೆ ತೀವ್ರ ಸ್ಪರ್ಧೆ ಇದೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಸಚಿವರಾದ ವಿ. ಸೋಮಣ್ಣ, ಕೆ. ಸುಧಾಕರ್ ಸೇರಿದಂತೆ ಹಲವು ಪ್ರಮುಖರು ಕಣದಲ್ಲಿದ್ದಾರೆ.
ಎನ್.ಡಿ.ಎ. ಅಭ್ಯರ್ಥಿಗಳ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು, ಮಂಗಳೂರು, ಮೈಸೂರು, ಚಿಕ್ಕಬಳ್ಳಾಪುರದಲ್ಲಿ ಪ್ರಚಾರ ನಡೆಸಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ ಬೆಂಗಳೂರು ಸೇರಿ ಹಲವೆಡೆ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೋಲಾರ ಮತ್ತು ಮಂಡ್ಯದಲ್ಲಿ, ಪ್ರಿಯಾಂಕಾ ಗಾಂಧಿ ಚಿತ್ರದುರ್ಗ, ಬೆಂಗಳೂರಿನಲ್ಲಿ ಪ್ರಚಾರ ನಡೆಸಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ಹೆಚ್.ಡಿ. ಕುಮಾರಸ್ವಾಮಿ, ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಘಟಾನುಘಟಿ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಚುನಾವಣಾ ಕಣದಲ್ಲಿ ಆರೋಪ, ಪ್ರತ್ಯಾರೋಪ, ಟೀಕೆ, ವೈಯಕ್ತಿಕ ನಿಂದನೆ ಕೂಡ ನಡೆದಿದೆ.
ಏಪ್ರಿಲ್ 26ರಂದು ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ಚಾಮರಾಜನಗರ, ಮೈಸೂರು –ಕೊಡಗು, ಉಡುಪಿ –ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಈಗಾಗಲೇ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ.