ಬೆಂಗಳೂರು: ನೆರೆ ಸಂತ್ರಸ್ತರ ನೆರವಿಗೆ ಸಮರೋಪಾದಿ ವ್ಯವಸ್ಥೆ ಕೈಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೋವಿಡ್ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ, ಪ್ರಕೃತಿ ವಿಕೋಪದ ಸಂದರ್ಭದಲ್ಲಿ ರಕ್ಷಣಾ ಕಾರ್ಯಚರಣೆ ವ್ಯವಸ್ಥೆಯನ್ನು ಬಲಪಡಿಸಲು ಇನ್ನೂ ಎರಡು ಎಸ್.ಡಿ.ಆರ್.ಎಫ್. ತಂಡಗಳನ್ನು ರಚಿಸಲು ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು 21 ಜಿಲ್ಲೆಗಳಿಗೆ 200 ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗಿದೆ. ಕಾಳಜಿ ಕೇಂದ್ರಕ್ಕೆ ಬರದವರಿಗೆ ಡ್ರೈ ರೇಶನ್ ಕಿಟ್ ವಿತರಿಸಲು ಸಿಎಂ ಸೂಚನೆ ನೀಡಿದ್ದಾರೆ.
ಅತಿವೃಷ್ಟಿಯಿಂದ ಹಾನಿಗೊಳಗಾಗಿ ಸಂಪರ್ಕ ಕಡಿತವಾಗುವ ರಸ್ತೆ, ಸೇತುವೆಗಳನ್ನು ತಕ್ಷಣವೇ ದುರಸ್ತಿಗೊಳಿಸಿ ಸಂಪರ್ಕ ಮರು ಸ್ಥಾಪಿಸಬೇಕು. ವಿದ್ಯುತ್ ಕಂಬ, ಟ್ರಾನ್ಸ್ ಫಾರ್ಮರ್ ಹಾನಿಗೀಡಾದಲ್ಲಿ ಕೂಡಲೇ ಮರು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಪ್ರವಾಹ ಪರಿಸ್ಥಿತಿ, ಭೂಕುಸಿತ, ಬೆಳೆ ಹಾನಿ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾಹಿತಿ ಪಡೆದುಕೊಂಡ ಸಿಎಂ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕಾಳಜಿ ಕೇಂದ್ರಗಳಲ್ಲಿ ಸಂತ್ರಸ್ತರಿಗೆ ಉತ್ತಮ ಆಹಾರ ಒದಗಿಸಬೇಕು. ಕಾಳಜಿ ಕೇಂದ್ರಕ್ಕೆ ಬರಲು ಸಾಧ್ಯವಾಗದ ನಿರಾಶ್ರಿತರಿಗೆ ಡ್ರೈರೇಷನ್ ಕಿಟ್ ವಿತರಿಸಬೇಕೆಂದು ಸಿಎಂ ತಿಳಿಸಿದ್ದಾರೆ.
ಸಭೆಯಲ್ಲಿ ಸಚಿವರಾದ ಆರಗ ಜ್ಞಾನೇಂದ್ರ, ಕೋಟ ಶ್ರೀನಿವಾಸ ಪೂಜಾರಿ, ಡಾ.ಸಿ.ಎನ್. ಅಶ್ವತ್ಥನಾರಾಯಣ, ನಾರಾಯಣಗೌಡ, ಗೋಪಾಲಯ್ಯ, ಬೈರತಿ ಬಸವರಾಜ್ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಹಲವರು ಇದ್ದರು.