ಬೆಂಗಳೂರು: ಭದ್ರತಾ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಗೆ ಹುಳ ಇದ್ದ ಊಟ ಪೂರೈಕೆ ಮಾಡಿದ ಕೇಟರರ್ಸ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಾಕಿಸ್ತಾನ -ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಪಂದ್ಯ ನಡೆಯುವ ಸಂದರ್ಭದಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರಿಗೆ ಹುಳ ಇದ್ದ ಊಟ ಸರಬರಾಜು ಮಾಡಲಾಗಿತ್ತು. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಿಂದ ಭದ್ರತಾ ಸಿಬ್ಬಂದಿಗೆ ಊಟದ ವ್ಯವಸ್ಥೆ ಮಾಡಲು ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿಯೊಂದಕ್ಕೆ ವಹಿಸಿದೆ. ಈ ಕಂಪನಿ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿರುವ ಕೇಟರರ್ಸ್ ನವರಿಗೆ ಮಧ್ಯಾಹ್ನ ಊಟ ಪೂರೈಕೆಗೆ ವಹಿಸಿದೆ.
ಭದ್ರತಾ ಕಾರ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ನೀಡಿದ್ದ ಮೊಸರನ್ನದಲ್ಲಿ ಹುಳ ಪತ್ತೆಯಾಗಿದ್ದು, ಪೊಲೀಸ್ ಸಿಬ್ಬಂದಿ ವಾಟ್ಸಾಪ್ ಗ್ರೂಪ್ ಗಳಲ್ಲಿ ಫೋಟೋ ಹರಿದಾಡಿತ್ತು. ಇದಕ್ಕೆ ಸಂಬಂಧಿಸಿದಂತೆ ಕೇಟರರ್ಸ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಕಳೆದ ಸೆಪ್ಟೆಂಬರ್ ನಲ್ಲಿ ಕಾವೇರಿ ಹೋರಾಟ, ಬಂದ್ ವೇಳೆ ಭದ್ರತಾ ಕಾರ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ನೀಡಿದ ಆಹಾರದಲ್ಲಿ ಸತ್ತ ಇಲಿ ಪತ್ತೆಯಾಗಿತ್ತು. ಆಹಾರ ಪೂರೈಕೆ ಮಾಡಿದ್ದ ಹೋಟೆಲ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು.