ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ರಾಜ್ಯದ ವಿವಿಧ ಸರ್ಕಾರಿ ಹಾಗೂ ಖಾಸಗಿ ಬಸ್ ನಿಲ್ದಾಣಗಳ ವ್ಯಾಪಾರ ಮಳಿಗೆಗಳನ್ನು ಪರಿಶೀಲನೆ ನಡೆಸಿದ್ದು, ಈ ವೇಳೆ ಹಲವು ಮಳಿಗೆಗಳಲ್ಲಿ ನೈರ್ಮಲ್ಯದ ಕೊರತೆ ಹೊಂದಿರುವುದು ದೃಢಪಟ್ಟಿದೆ.
ಮುಖ್ಯಮಂತ್ರಿ ಕಚೇರಿ ಸೂಚನೆ ಮೇರೆಗೆ ಜೂನ್ ತಿಂಗಳಲ್ಲಿ ವಿಶೇಷ ಅಭಿಯಾನ ನಡೆಸಲಾಗಿದೆ. ರಾಜ್ಯಾದ್ಯಂತ 201 ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣಗಳಲ್ಲಿ ಇರುವ 748 ವ್ಯಾಪಾರ ಮಳಿಗೆಗಳು ಹಾಗೂ ಆಹಾರ ಉದ್ದಿಮೆಗಳನ್ನು ಪರಿಶೀಲನೆ ಮಾಡಲಾಗಿದೆ ಎಂದು ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.
ಈ ಪರಿಶೀಲನೆ ಸಂದರ್ಭದಲ್ಲಿ 179 ವ್ಯಾಪಾರ ಮಳಿಗೆಗಳು ಪರವಾನಗಿ ಹೊಂದಿಲ್ಲದಿರುವುದು ದೃಢಪಟ್ಟಿದೆ. 120 ಆಹಾರ ಮಳಿಗೆಗಳಲ್ಲಿ ನೈರ್ಮಲ್ಯದ ಕೊರತೆ ಕಂಡುಬಂದಿದ್ದು, ನೋಟಿಸ್ಗಳನ್ನು ನೀಡಲಾಗಿದೆ. 19 ಆಹಾರ ಮಳಿಗೆಗಳಿಗೆ ದಂಡ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.