ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಕೃಷಿ ಉದ್ದೇಶದಿಂದ ಒತ್ತುವರಿ ಮಾಡಿದ ಭೂಮಿ ಸಕ್ರಮಕ್ಕೆ ಕರ್ನಾಟಕ ಭೂಕಂದಾಯ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಧುಸ್ವಾಮಿ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಹೆಚ್.ಕೆ. ಪಾಟೀಲ್ ಅವರು ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿ, ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕೆಲೂರ ಗ್ರಾಮದಲ್ಲಿ ಪಾರಂಪರಿಕ ಅರಣ್ಯ ವಾಸಿಗಳ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ದೌರ್ಜನ್ಯ ನಡೆಸಿ ತೋಟ ನಾಶ ಮಾಡಿದ್ದಾರೆ ಎಂದು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಮಾಧುಸ್ವಾಮಿ, ಕಾಯ್ದೆಯ ಸೆಕ್ಷನ್ 192(ಎ) ಯಿಂದ ಸಮಸ್ಯೆ ಆಗುತ್ತಿದೆ. ಇದನ್ನು ಶಾಶ್ವತವಾಗಿ ಪರಿಹರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ 192(ಎ) ಗೆ ಇದೇ ಅಧಿವೇಶನದಲ್ಲಿಯೇ ತಿದ್ದುಪಡಿ ಮಾಡಲಾಗುವುದು ಎಂದು ಹೇಳಿದ್ದಾರೆ.
192(ಎ) ಪ್ರಕಾರ ಸರ್ಕಾರಿ ಭೂಮಿ ಕಬಳಿಕೆ ಮಾಡುವುದು, ಕಾನೂನು ಬಾಹಿರವಾಗಿ ಪ್ರವೇಶಿಸುವುದು, ಸ್ವಾಧೀನಪಡಿಸಿಕೊಳ್ಳುವುದು ಅಪರಾಧವಾಗಿದ್ದು, ಒಂದು ವರ್ಷ ಜೈಲುಶಿಕ್ಷೆ, 50 ಸಾವಿರ ರೂಪಾಯಿ ದಂಡ ವಿಧಿಸಬಹುದಾಗಿದೆ.