ಬೆಂಗಳೂರು: ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿರುವ ನಿವಾಸಿಗಳು, ಸಣ್ಣ ಹಿಡುವಳಿದಾರರನ್ನು ಒಕ್ಕಲೆಬ್ಬಿಸಲು ಅವಕಾಶ ನೀಡುವುದಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ವಿಧಾನಸೌಧ ಸಭಾಂಗಣದಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿ ಕುರಿತಾಗಿ ಶಿಕ್ಷಣ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾಹಿತಿ ನೀಡಿದರು.
ಅರಣ್ಯ ಪ್ರದೇಶದಲ್ಲಿ ಮೂರು ಎಕರೆ ಸಾಗುವಳಿ ಮಾಡಿದವರಿಗೆ ಯಾವುದೇ ತೊಂದರೆ ಇಲ್ಲ. ಅವರ ಹಿತ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಕಾನೂನು ತೊಡಕು ನಿವಾರಣೆಗೆ ಪರಿಣಿತರ ಸಮಿತಿ ರಚನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಜಂಟಿ ಸರ್ವೆ ಆಗದೇ ಕಂದಾಯ ಮತ್ತು ಅರಣ್ಯ ಭೂಮಿಯ ನಿಖರ ವ್ಯಾಪ್ತಿ ನಿಗದಿಯಾಗಿಲ್ಲ. ಶೀಘ್ರವೇ ಜಂಟಿ ಸರ್ವೆ ಕಾರ್ಯ ಕೈಗೊಳ್ಳಲಾಗುವುದು. ಅದುವರೆಗೂ ಯಾವ ಭೂಮಿಯನ್ನೂ ಇಂಡೀಕರಣ ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಸಚಿವ ಮಧು ಬಂಗಾರಪ್ಪ ಮಾತನಾಡಿ, ಶರಾವತಿ ಮುಳುಗಡೆ ಸಂತ್ರಸ್ತರ ಬದುಕು ಅತಂತ್ರವಾಗಿದೆ. 1958 -68ರ ಅವಧಿಯಲ್ಲಿ 27 ಅಧಿಸೂಚನೆಗಳ ಮೂಲಕ ಪುನರ್ವಸತಿಗಾಗಿ 9127 ಎಕರೆ ಅರಣ್ಯ ಭೂಮಿ ನೀಡಲಾಗಿದ್ದು, ಡಿರಿಸರ್ವೇಶನ್ ಮಾಡಿದ ಸರ್ಕಾರದ ಆದೇಶವನ್ನು ಹೈಕೋರ್ಟ್ ವಜಾಗೊಳಿಸಿರುವುದರಿಂದ ಸಂತ್ರಸ್ತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಬೇಕು. ಕೇಂದ್ರ ಸರ್ಕಾರಕ್ಕೆ ಪೂರ್ವಾನುಮತಿಗೆ ಸಲ್ಲಿಸಿದ ಪ್ರಸ್ತಾವನೆ ಸ್ವೀಕೃತವಾಗಿಲ್ಲ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಸಚಿವರಾದ ಕೃಷ್ಣ ಬೈರೇಗೌಡ, ಬಿ. ನಾಗೇಂದ್ರ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಭೀಮಣ್ಣ ನಾಯಕ, ಶಾರದಾ ಪೂರ್ಯಾನಾಯ್ಕ, ಎಸ್.ಎನ್. ಚನ್ನಬಸಪ್ಪ, ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿ, ಪಾಲಿಕೆ ಸದಸ್ಯ ಬಿ.ಎ. ರಮೇಶ ಹೆಗಡೆ ಮೊದಲಾದವರು ಇದ್ದರು.