ಬೆಂಗಳೂರು: ಪಶ್ಚಿಮ ಘಟ್ಟ ಅರಣ್ಯ ಪ್ರದೇಶದ 10 ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಳೆದ ಒಂದು ತಿಂಗಳಿನಿಂದ ಕೈಗೊಂಡಿರುವ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆಯ ವಲಯವಾರು ಭಾವಚಿತ್ರ ಸಹಿತ ವರದಿ ನೀಡುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ವಲಯ ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪಶ್ಚಿಮಘಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮ ಒತ್ತುವರಿ ತೆರವಿಗೆ ವೇಗ ನೀಡಲಾಗುತ್ತಿದೆ. ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಲಾದ ರೆಸಾರ್ಟ್, ಹೋಂ ಸ್ಟೇಗಳು, ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಲ್ಲದ ಕರ್ನಾಟಕ ಅರಣ್ಯ ಕಾಯ್ದೆ ಅಡಿಯಲ್ಲಿ ಪ್ರಕ್ರಿಯೆ ಪೂರ್ಣಗೊಂಡಿರುವ ಒತ್ತುವರಿಗಳನ್ನು ತೆರವು ಮಾಡುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ.
ಕಳೆದ ಒಂದು ತಿಂಗಳಿನಿಂದ ನಡೆಸಲಾದ ಒತ್ತುವರಿ ತೆರವಿನ ಸಂಪೂರ್ಣ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದ್ದಾರೆ. ಮೂರು ಎಕರೆಗಿಂತ ಹೆಚ್ಚಿನ ಅರಣ್ಯ ಒತ್ತುವರಿಗಳನ್ನು ಗುರುತಿಸಿ ತೆರವು ಮಾಡುವಂತೆ ಸೂಚನೆ ನೀಡಿದ್ದಾರೆ. ಹೀಗೆ, ಒತ್ತುವರಿ ತೆರವು ಮಾಡುವ ಸಂದರ್ಭದಲ್ಲಿ 30 ಎಕರೆಗಿಂತ ಹೆಚ್ಚಿನ ಒತ್ತುವರಿ, 10 ರಿಂದ 30 ಎಕರೆವರೆಗಿನ ಒತ್ತುವರಿ, 3 ಎಕರೆಯಿಂದ 10 ಎಕರೆವರೆಗಿನ ಒತ್ತುವರಿಯನ್ನು ಗುರುತಿಸಿ ಕಾರ್ಯಾಚರಣೆ ಕೈಗೊಳ್ಳಬೇಕು. ನಿಗದಿತ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಕರ್ನಾಟಕ ಅರಣ್ಯ ಕಾಯ್ದೆ ಮತ್ತು ನ್ಯಾಯಾಲಯಗಳಲ್ಲಿ ಪ್ರಕರಣ ದಾಖಲಿದ್ದರೆ ಅದನ್ನು ಶೀಘ್ರ ವಿಲೇವಾರಿಗೆ ಕ್ರಮ ಕೈಗೊಂಡು ಒತ್ತುವರಿ ತೆರವು ಮಾಡಬೇಕು. ಹೀಗೆ ತೆರವುಗೊಳಿಸುವಾಗ 3 ಎಕರೆಗಿಂತ ಕಡಿಮೆ ಒತ್ತುವರಿಯನ್ನು ತೆರೆವು ಮಾಡದಂತೆ ಸಚಿವರು ಸೂಚನೆ ನೀಡಿದ್ದಾರೆ.