ಉಡುಪಿ : ಅರಬ್ಬಿ ಸಮುದ್ರದಲ್ಲಿ (Arabian Sea) ವಾಯುಭಾರ ಕುಸಿತದ ಪರಿಣಾಮ ಕರಾವಳಿ ಭಾಗದಲ್ಲಿ ಮುಂದಿನ 4 ದಿನ ಭಾರೀ ಮಳೆಯಾಗುವ (Heavy rain) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (India Meteorological Department) ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯುವುದಕ್ಕೆ ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪ್ರವಾಸಿಗರು, ಸ್ಥಳೀಯರು, ಸಮುದ್ರ, ನದಿ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ಜೊತೆಗೆ ತಗ್ಗು ಪ್ರದೇಶಗಳ ನಿವಾಸಿಗಳು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಉಡುಪಿ ಜಿಲ್ಲಾಡಳಿತ ಮಾಹಿತಿ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಬಹುತೇಕ ಕಡೆ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.