ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಕರಾವಳಿ ಭಾಗದಲ್ಲಿ ಮಳೆ ಸಂಬಂಧಿ ಅವಘಡಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಮಳೆಯ ಅಬ್ಬರದಿಂದಾಗಿ ಮಂಗಳೂರು, ಉಡುಪಿ, ಕುಂದಾಪುರ, ಕಾರವಾರ ತಾಲೂಕಿನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಮಳೆಯಿಂದಾಗಿ ಕರಾವಳಿ, ಮಲೆನಾಡು ಭಾಗದ ನದಿಗಳಲ್ಲಿ ನೀರಿನ ಹರಿವು ಹೆಚ್ಚಿದ್ದು, ಉಡುಪಿ ಸಮೀಪದ ಬಜೆ ಹಾಗೂ ಶಿವಮೊಗ್ಗದ ಗಾಜನೂರು ಜಲಾಶಯಗಳು ಭರ್ತಿಯಾಗಿವೆ.
ರಾಜ್ಯಾದ್ಯಂತ 2 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಹಾವೇರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಈ ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಶಾಲೆ, ಪಿಯುಸಿ, ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆ, ಪಿಯು ಪದವಿ ಕಾಲೇಜುಗಳಿಗೆ ಡಿಸಿ ಮುಲ್ಲೈ ಮುಗಿಲನ್ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಇಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಕುರ್ಮಾರಾವ್ ಆದೇಶ ಹೊರಡಿಸಿದ್ದಾರೆ.