
ಕಾರವಾರ: ಜನರಿಗೆ ಯಾವುದನ್ನೂ ಉಚಿತವಾಗಿ ನೀಡಬಾರದು, ಉಚಿತ ಎಂಬ ಪದವೇ ಅಪಾಯಕಾರಿ. ಯಾವುದೇ ಸೇವೆಯಾದರೂ ಅದಕ್ಕೆ ಶುಲ್ಕ ನಿಗದಿಪಡಿಸಬೇಕು ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ದಾಂಡೇಲಿ ತಾಲೂಕಿನ ಅಂಬೆವಾಡಿಯಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿ, ಗ್ಯಾರಂಟಿ ಯೋಜನೆಯಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಅವಕಾಶ ಕಲ್ಪಿಸಲಾಗಿದೆ. ಪುರುಷರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವಂತೆ ಬೇಡಿಕೆ ಇತ್ತು. ಎಲ್ಲವನ್ನು ಉಚಿತವಾಗಿ ನೀಡಿದರೆ ಸಂಸ್ಥೆಯ ನಿರ್ವಹಣೆ ಸಾಧ್ಯವಾಗದು ಎಂದು ಹೇಳಿದ್ದಾರೆ.
ಯಾರಿಗೆ ಆಗಲಿ ಉಚಿತ ಎನ್ನುವ ಶಬ್ದ ಅಪಾಯಕಾರಿಯಾಗಿದ್ದು, ಜನರನ್ನು ಸೋಂಬೇರಿಗಳನ್ನಾಗಿ ಮಾಡುತ್ತದೆ. ಯಾವುದೇ ಆಗಲಿ ಉಚಿತವಾಗಿ ಸಿಗಬಾರದು, ಆ ವಸ್ತುವಿನ ಬೆಲೆ ನೀಡಿಯೇ ಪಡೆಯಬೇಕು ಎಂದು ಹೇಳಿದ್ದಾರೆ.
ಈ ಮೂಲಕ ಅವರು ಗ್ಯಾರಂಟಿ ಯೋಜನೆ ಬಗ್ಗೆ ಅಪಸ್ವರ ಎತ್ತಿದ್ದಾರೆ. ಉಚಿತ ಕೊಡುಗೆ ಕೊಡುತ್ತಾ ಹೋದರೆ ಆಡಳಿತ ನಡೆಸುವುದು ಕಷ್ಟವಾಗುತ್ತದೆ. ರಾಜ್ಯದಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಗಮನ ನೀಡಬೇಕು. ಉದ್ಯೋಗ ಸೃಷ್ಟಿಗೆ ಕ್ರಮ ಕೈಗೊಳ್ಳಬೇಕು. ಈ ಉಚಿತ ಯೋಜನೆಗಳೇ ಸಂಸತ್ತು ಚುನಾವಣೆಯಲ್ಲಿ ನಮ್ಮನ್ನು ಗೆಲ್ಲಿಸಲಿಲ್ಲ ಎಂದು ಹೇಳಿದ್ದಾರೆ.