ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವು ಉತ್ಪಾದನೆ ಪ್ರೋತ್ಸಾಹಿಸಲು ರೈತರಿಗೆ ಉಚಿತವಾಗಿ ಮೇವಿನ ಬೀಜದ ಕಿಟ್ ಗಳನ್ನು ವಿತರಿಸಲಾಗುವುದು ಎಂದು ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಶಾಸಕ ಮಧು ಜಿ. ಮಾದೇಗೌಡ ಅವರ ಚುಕ್ಕೆರಹಿತ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಮೇವು ಉತ್ಪಾದನೆ ಪ್ರೋತ್ಸಾಹಿಸಲು 22 ಕೋಟಿ ರೂಪಾಯಿ ಅನುದಾನದಲ್ಲಿ 8,17,426 ಮೇವಿನ ಬೀಜದ ಕಿರು ಪೊಟ್ಟಣಗಳನ್ನು ಖರೀದಿಸಿ ಬರ ಘೋಷಣೆಯಾದ ತಾಲೂಕುಗಳ ರೈತರಿಗೆ ಉಚಿತವಾಗಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದ ರೈತರ ಬಳಿ ಅಂದಾಜು 142 ಲಕ್ಷ ಟನ್ ಮೇವು ಲಭ್ಯವಿದ್ದು, 26 ವಾರಗಳಿಗೆ ಸಾಕಾಗುತ್ತದೆ ಎಂದು ಅಂದಾಜಿಸಲಾಗಿದೆ. ಸದ್ಯಕ್ಕೆ ಮೇವಿಗೆ ತೊಂದರೆಯಾಗಿಲ್ಲ. ಮೇವು ನಿಧಿ ಜಾನುವಾರು ಶಿಬಿರಗಳನ್ನು ಆರಂಭಿಸಿಲ್ಲ. ಪೂರ್ವ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಅಂತರ ರಾಜ್ಯ, ಹೊರ ರಾಜ್ಯಗಳಿಗೆ ಮೇವು ಸಾಗಣೆ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.