ಬೆಂಗಳೂರು: ಭೂ ದಾಖಲೆಗಳನ್ನು ಸಂಪೂರ್ಣ ಡಿಜಿಟಲೀಕರಣ ಮಾಡಿ ಆನ್ಲೈನ್ ಸೇವೆ ನೀಡಲು ಯೋಜನೆ ರೂಪಿಸಲಾಗುತ್ತಿದೆ.
ಕಂದಾಯ ಸಚಿವ ಕೃಷ್ಣಬೈರೇಗೌಡ ಈ ಕುರಿತು ಮಾಹಿತಿ ನೀಡಿದ್ದಾರೆ. ಯವನಿಕಾ ಸಭಾಂಗಣದಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಮತ್ತು ಅಧಿಕಾರಿಗಳಿಗೆ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಬಹುತೇಕ ಜಮೀನಿನ ದಾಖಲೆಗಳಲ್ಲಿ ಸಮಸ್ಯೆ ಇದೆ. ಭೂ ಮಾಲೀಕ ಅದನ್ನು ಸದ್ಬಳಕೆ ಮಾಡಿಕೊಳ್ಳಲಾಗದೇ ಆರ್ಥಿಕತೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು, ಕಂದಾಯ ಇಲಾಖೆಯ ಭೂ ದಾಖಲೆಗಳನ್ನು ಸಂಪೂರ್ಣ ಡಿಜಿಟಲ್ ಮಾಡಿ ಕಾವೇರಿ 2.0 ತಂತ್ರಾಂಶಕ್ಕೆ ಲಿಂಕ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಎಲ್ಲರಿಗೂ ನೇರ ಸೇವೆ ನೀಡುವ ಕಂದಾಯ ಇಲಾಖೆಯನ್ನು ಮಾತೃ ಇಲಾಖೆ ಎನ್ನುತ್ತಾರೆ. ಜನರಿಗೆ ಉತ್ತಮ ಸೇವೆ ನೀಡುವುದು ನಮ್ಮ ಕರ್ತವ್ಯ. ಈ ನಿಟ್ಟಿನಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಕುಡಿಯುವ ನೀರು, ಶೌಚಾಲಯ, ಕುರ್ಚಿ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಹೇಳಿದ್ದಾರೆ.
ನೋಂದಣಿ ಮತ್ತು ಮುದ್ರಾಂಕ ಇಲಾಖೆ ಕಾವೇರಿ 2.0 ತಂತ್ರಾಂಶವನ್ನು ಯಶಸ್ವಿಯಾಗಿ ಅಳವಡಿಸಿದೆ. ಕೆಲವೊಂದು ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸಲಾಗುವುದು ಎಂದು ಹೇಳಿದ್ದಾರೆ.