ಬೆಂಗಳೂರು: ಪರಿಶಿಷ್ಟ ಜಾತಿಗೆ ಮೀಸಲಾದ ಮುಳಬಾಗಿಲು ಕ್ಷೇತ್ರದಿಂದ 2013ರ ವಿಧಾನಸಭೆ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಹಾಲಿ ಕೋಲಾರ ಶಾಸಕ ಜಿ. ಮಂಜುನಾಥ್ ವಿರುದ್ಧ ಸುಳ್ಳು ಜಾತಿ ಪ್ರಮಾಣ ಪತ್ರ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ಆದೇಶಿಸಿದೆ.
ಸುಳ್ಳು ಪ್ರಮಾಣ ಪತ್ರ ನೀಡಿ ಆಯ್ಕೆಯಾಗುವ ಮೂಲಕ ಮಂಜುನಾಥ್ ಪರಿಶಿಷ್ಟ ಜಾತಿಗಳ ವರ್ಗಕ್ಕೆ ವಂಚಿಸಿರುವುದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದ್ದು, ಯಾವ ಕ್ರಮ ಕೈಗೊಳ್ಳಬೇಕೆಂಬ ವಿವೇಚನೆಯನ್ನು ಸರ್ಕಾರಕ್ಕೆ ಬಿಟ್ಟಿದೆ.
ಅರ್ಜಿದಾರರು ಶಾಸಕರಾಗಿದ್ದು, ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸುವ ಮೂಲಕ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ಕ್ಷೇತ್ರ ಕಸಿದುಕೊಂಡಿದ್ದಾರೆ. ಸಂವಿಧಾನಕ್ಕೆ ಎಸಗಿದ ಮೋಸ ಇದಾಗಿದೆ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.
2021ರ ಅಕ್ಟೋಬರ್ 27ರಂದು ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ವರದಿಯ ಸಿಂಧುತ್ವ ಪ್ರಶ್ನಿಸಿ ಮಂಜುನಾಥ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ವಜಾಗೊಳಿಸಿದೆ. ಜಿಲ್ಲಾ ಜಾತಿ ಪರಿಶೀಲನಾ ಸಮಿತಿಯ ವರದಿಯಲ್ಲಿ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂದು ಹೇಳಿದೆ.
ಮಂಜುನಾಥ್ ಪರಿಶಿಷ್ಟ ಜಾತಿಗೆ ಸೇರಿದ ಬುಡ್ಗ ಜಂಗಮ ಜಾತಿಗೆ ಸೇರಿದವರಲ್ಲ, ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಭೈರಾಗಿ ಜಾತಿಗೆ ಸೇರಿದವರು ಎಂದು ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ವರದಿ ನೀಡಿತ್ತು.
2013ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಮುಳಬಾಗಿಲು ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಂಜುನಾಥ್ ಆಯ್ಕೆಯಾಗಿದ್ದರು. ಬುಡ್ಗ ಜಂಗಮ ಜಾತಿಗೆ ಸೇರಿದವರು ಎಂದು ಸಾಬೀತುಪಡಿಸಲು ವಿಫಲರಾದ ಹಿನ್ನೆಲೆಯಲ್ಲಿ 2018ರ ಏಪ್ರಿಲ್ ನಲ್ಲಿ ಹೈಕೋರ್ಟ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಿದ್ದು, ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮಂಜುನಾಥ್ ಅವರ ಜಾತಿ ಪ್ರಮಾಣ ಪತ್ರ ಪರಿಶೀಲನೆಗೆ ಜಿಲ್ಲಾ ಜಾತಿ ಪರಿಶೀಲನಾ ಸಮಿತಿಗೆ ವಹಿಸಿದ್ದು, ವರದಿ ತನ್ನ ವಿರುದ್ಧ ಬಂದರೆ ಅದನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಬಹುದು ಎಂದು ತಿಳಿಸಿತ್ತು.
ಸುಪ್ರೀಂ ಕೋರ್ಟ್ ಆದೇಶದಂತೆ ವಿಚಾರಣೆ ನಡೆಸಿದ ಜಿಲ್ಲಾ ಜಾತಿ ಪರಿಶೀಲನಾ ಸಮಿತಿ 2021ರ ಅಕ್ಟೋಬರ್ 27ರಂದು ವರದಿ ಸಲ್ಲಿಸಿತ್ತು. ವರದಿ ಮಂಜುನಾಥ್ ಅವರಿಗೆ ವಿರುದ್ಧವಾಗಿದ್ದ ಕಾರಣ ಅದನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು.