ಶಿವಮೊಗ್ಗ: ಮುಂಬರುವ ದಿನಗಳಲ್ಲಿ ಜಗತ್ತಿಗೆ ಎಥೆನಾಲ್ ರಫ್ತು ಮಾಡುವ ಗುರಿ ಹೊಂದಲಾಗಿದೆ. ಭವಿಷ್ಯದಲ್ಲಿ ಎಥೆನಾಲ್ ಹಾಗೂ ಮಿಥೆನಾಲ್ ಆಧಾರಿತ ವಾಹನಗಳನ್ನು ರಸ್ತೆಗಿಳಿಸುವ ಮೂಲಕ ಪರಿಸರ ರಕ್ಷಣೆ ಜತೆಗೆ ರೈತರ ಆರ್ಥಿಕಾಭಿವೃದ್ಧಿಗೂ ಅವಕಾಶ ಕಲ್ಪಿಸಲಾಗುವುದು ಎಂದು ಕೇಂದ್ರ ರಸ್ತೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ರಸ್ತೆ ಸಾರಿಗೆ ಮತ್ತು ಹೆದ್ದಾರಿ, ಭಾರತ ಸರ್ಕಾರ ಹಾಗೂ ಪಿ.ಡಬ್ಲ್ಯ.ಡಿ. ಇಲಾಖೆ ಶಿವಮೊಗ್ಗ ವತಿಯಿಂದ ಇಂದು ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ವಿವಿಧ ಕಾಮಗಾರಿಗಳ ಚಾಲನೆ ಮತ್ತು ಶಂಕುಸ್ಥಾಪನೆಗೊಳಿಸುವ ಕಾರ್ಯಕ್ರಮದಲ್ಲಿ 7 ಜಿಲ್ಲೆಗಳಿಗೆ ಸಂಬಂಧಿಸಿದ 6200 ಕೋಟಿ ರೂ.ಮೊತ್ತದ ಒಟ್ಟು 300 ಕಿ.ಮೀ ಉದ್ದದ ಒಟ್ಟು 18 ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಗಳ ಉದ್ಘಾಟನೆ ಹಾಗೂ 2,138.30 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಪೂರಕ ಇಂಧನವಾಗಿ ಎಥೆನಾಲ್ ಬಳಕೆಗೆ ಸಲಹೆ ನೀಡಿದ ಅವರು, ಪೆಟ್ರೋಲ್, ಡೀಸೆಲ್ ಬೆಲೆಗೆ ಹೋಲಿಸಿದರೆ ಎಥೆನಾಲ್ ಕಡಿಮೆ ದರದಲ್ಲಿ ದೊರಕುತ್ತದೆ. ಎಥೆನಾಲ್, ಗ್ರೀನ್ ಹೈಡ್ರೋಜನ್, ಎಲೆಕ್ಟ್ರಿಕಲ್ ವಾಹನಗಳು ಸೇರಿದಂತೆ ಜೈವಿಕ ಇಂಧನ ನಮ್ಮ ಮುಂದಿನ ಭವಿಷ್ಯವಾಗಿದೆ. ಜಿಲ್ಲೆಯಲ್ಲಿ ಎಥೆನಾಲ್ ಉತ್ಪಾದನೆ ಹಾಗೂ ಬಳಕೆಗೆ ಹೆಚ್ಚು ಅವಕಾಶಗಳಿವೆ. ಎಥೆನಾಲ್ ನಿಂದ ವಿಮಾನ ಇಂಧನ ಸಹ ತಯಾರಾಗುತ್ತಿದ್ದು ರೈತರ ಅಭಿವೃದ್ಧಿ ಮತ್ತು ಪರಿಸರ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ಎಥೆನಾಲ್ ಬಳಕೆಗೆ ರಾಜ್ಯ ಸರ್ಕಾರ ಪ್ರೋತ್ಸಾಹ ನೀಡಬೇಕು. ರಾಜ್ಯ ಜೈವಿಕ ಇಂಧನ ಉತ್ಪಾದಕ ಹಬ್ ಆಗಬಹುದು ಎಂದರು.
ಬೆಂಗಳೂರು ರಿಂಗ್ ರಸ್ತೆ- ಜನವರಿ 2025 ರಲ್ಲಿ ಪೂರ್ಣ:
ಬೆಂಗಳೂರು ಸಂಚಾರ ದಟ್ಟಣೆ ಕಡಿಮೆಗೊಳಿಸಲು 17 ಸಾವಿರ ಕೋಟಿ ವೆಚ್ಚದ ರಿಂಗ್ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಇದರಿಂದ ಸಾರಿಗೆ ಸಮಸ್ಯೆ ನಿವಾರಣೆ ಜತೆಗೆ ರಾಜ್ಯದ ಜನರಿಗೆ ಅನುಕೂಲವಾಗಲಿದೆ. ಜನವರಿ 2025 ರ ವೇಳೆಗೆ ಆರು ಪ್ಯಾಕೆಜ್ ಗಳ ರಿಂಗ್ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು. ಕರ್ನಾಟಕದ ಬಂದರುಗಳು ಅಭಿವೃದ್ಧಿಗೊಂಡರೆ ರಾಜ್ಯದ ಅಭಿವೃದ್ಧಿಯ ವೇಗ ಇನ್ನಷ್ಟು ಹೆಚ್ಚಾಗಲಿದೆ ಎಂದು ಹೇಳಿದ್ದಾರೆ.
ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಸಿಗಂದೂರು ಕೇಬಲ್ ಸೇತುವೆ, ರಾಷ್ಟ್ರೀಯ ಹೆದ್ದಾರಿ ಉನ್ನತೀಕರಣ, ರಿಂಗ್ ರಸ್ತೆ, ರಾಣೆಬೆನ್ನೂರು-ಬೈಂದೂರು ರಸ್ತೆ, ಮೇಲ್ಸೇತುವೆಗಳಿಗೆ ಕೇಂದ್ರ ಸಚಿವರು ಅನುದಾನ ಒದಗಿಸಿದ್ದು, ಸಾರಿಗೆಯನ್ನು ಸುರಕ್ಷಿತ ಮತ್ತು ಕಡಿಮೆ ಸಮಯದಲ್ಲಿ ತಲುಪುವಂತೆ ಮಾಡಿದ್ದಾರೆ.
ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ರಸ್ತೆಗಳನ್ನು ಅಭಿವೃದ್ಧಿಪಡಿಸುವ ಮೂಲಕ ಸಮಗ್ರ ಅಭಿವೃದ್ಧಿಗೊಳಿಸುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕನಸಾಗಿದೆ. ಶಿವಮೊಗ್ಗ ಜಿಲ್ಲೆ ಸೇರಿದಂತೆ ದಕ್ಷಿಣ ವಲಯಕ್ಕೆ 6200 ಕೋಟಿ ರೂ. ಮೊತ್ತದ ಕಾಮಗಾರಿಗಳು ಲೋಕಾರ್ಪಣೆಗೊಳ್ಳುತ್ತಿರುವುದು ಸಂತಸದ ವಿಷಯ ಎಂದರು.
ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್.ಚನ್ನಬಸಪ್ಪ, ಗುರುರಾಜ ಶೆಟ್ಟಿ ಗಂಟಿಹೊಳೆ ಮಾತನಾಡಿದರು. ಬಳ್ಳಾರಿ ಸಂಸದ ದೇವೇಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ, ಪಿಡಬ್ಲ್ಯುಡಿ ಮುಖ್ಯ ಇಂಜಿನಿಯರ್ ರವೀಂದ್ರ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಪಂ ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಮೊದಲಾದವರಿದ್ದರು.