
ಗದಗ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಲಾಠಿಚಾರ್ಜ್ ಮಾಡಿರುವ ಘಟನೆ ಗದಗ ನಗರದ ಟಾಂಗಾಕೂಟ್ ಸರ್ಕಲ್ ನಲ್ಲಿ ನಡೆದಿದೆ.
ಎರಡು ಗುಂಪುಗಳ ಗಲಾಟೆ ನಿಯಂತ್ರಿಸಲು ಪೊಲಿಸರು ಲಾಠಿ ಪ್ರಹಾರ ನಡೆಸಿದ್ದಾರೆ. ಘಟನೆಯಲ್ಲಿ 10 ಜನರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರ ಕ್ರಮಕ್ಕೆ ಶ್ರೀರಾಮ ಸೇನೆ ಆಕ್ರೋಶ ವ್ಯಕ್ತಪಡಿಸಿದೆ. ಗಣೇಶ ಮೂರ್ತಿ ವಿಸರ್ಜನೆ ವೇಳೆ ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದವರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಹಿಂದೂ ಧಾರ್ಮಿಕ ಹಬ್ಬದ ಆಚರಣೆ ಸಂಭ್ರಮಿಸುತ್ತಿದ್ದವರ ಮೇಲೆ ಗಲಾಟೆ ಹೆಸರಲ್ಲಿ ದಾಳಿ ನಡೆಸಿರುವುದು ಸರಿಯಲ್ಲ ಎಂದು ಕಿಡಿಕಾರಿದೆ.