ಬೆಂಗಳೂರು: ಸುಲಭವಾಗಿ ಹಣ ಗಳಿಸಲು ಮಾದಕ ವಸ್ತು ಗಾಂಜಾ ಮಾರಾಟ ದಂಧೆಯಲ್ಲಿ ತೊಡಗಿದ್ದ ಫುಡ್ ಡೆಲಿವರಿ ಬಾಯ್ ನನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹದಳ ಅಧಿಕಾರಿಗಳು ಬಂಧಿಸಿದ್ದಾರೆ.
ಒಡಿಶಾ ಮೂಲದ ರೋಶನ್ ಕುಮಾರ್ ದಲೈ(27) ಬಂಧಿತ ಆರೋಪಿ. ಆತನಿಂದ 9 ಲಕ್ಷ ರೂ. ಮೌಲ್ಯದ ಗಾಂಜಾ, ಬಳಸುತ್ತಿದ್ದ ಮೊಬೈಲ್, ಎಲೆಕ್ಟ್ರಾನಿಕ್ ತೂಕದ ಯಂತ್ರ ಜಪ್ತಿ ಮಾಡಲಾಗಿದೆ. ರೋಶನ್ ಕುಮಾರ್ ಕಳೆದ ಮೂರು ವರ್ಷಗಳಿಂದ ಮಹಾದೇವಪುರದ ಮಹೇಶ್ವರಿ ನಗರದಲ್ಲಿ ನೆಲೆಸಿದ್ದ. ಸ್ವಿಗ್ಗಿ ಮತ್ತು ಝೋಮ್ಯಾಟೋಗಳಲ್ಲಿ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಸುಲಭವಾಗಿ ಹಣ ಗಳಿಸಲು ಒಡಿಶಾದಿಂದ ಕಡಿಮೆ ಬೆಲೆಗೆ ಮಾದಕ ವಸ್ತು ಗಾಂಜಾ ಖರೀದಿಸಿ ನಗರಕ್ಕೆ ತಂದು ಪರಿಚಿತ ಗಿರಾಕಿಗಳು, ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಮಾಹಿತಿ ಕಲೆ ಹಾಕಿದ ಸಿಸಿಬಿ ಪೊಲೀಸರು ಬಂಧಿಸಿ ಜೈಲಿಗೆ ಕಳಿಸಿದ್ದಾರೆ.