ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಹಳೆನಗರದ ಕಾಳಿಕಾಂಬ ದೇವಸ್ಥಾನದ ರಸ್ತೆಯಲ್ಲಿ ಶುಕ್ರವಾರ ಸಂಜೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಕೇಶವಮೂರ್ತಿ(60) ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟಿದ್ದಾರೆ.
ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಹಾಗೂ ಪುತ್ರ ಇದ್ದಾರೆ. ಸಿಲಿಂಡರ್ ಸ್ಪೋಟದಲ್ಲಿ ಗಾಯಗೊಂಡಿದ್ದ ಅವರ ಪತ್ನಿ ಚೇತರಿಸಿಕೊಂಡಿದ್ದಾರೆ. ಭದ್ರಾವತಿಯ ಹೊಸಮನೆ ರಸ್ತೆಯಲ್ಲಿ ಗೋಬಿ ಮಂಚೂರಿ ಅಂಗಡಿ ನಡೆಸುತ್ತಿದ್ದ ಕೇಶವಮೂರ್ತಿ ಭದ್ರಾವತಿ ಗಾಯತ್ರಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.
ಶುಕ್ರವಾರ ಸಂಜೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಯಲ್ಲಿ ಬೆಂಕಿ ತಗುಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ತೀವ್ರ ಅವಘಡ ಸಂಭವಿಸಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಕೇಶವಮೂರ್ತಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹಳೆನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.