
ತುಮಕೂರು: ನಗರದ ಸಿದ್ಧಗಂಗಾ ಮಠಕ್ಕೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ಭಾನುವಾರ ಭೇಟಿ ನೀಡಿ, ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದು, ಸಿದ್ಧಲಿಂಗ ಸ್ವಾಮೀಜಿ ಆಶೀರ್ವಾದ ಪಡೆದುಕೊಂಡರು.
ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈ ಹಿಂದೆ ರಾಜಕುಮಾರ್ ಅವರು ಮಠದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಇಲ್ಲಿಗೆ ಅನೇಕ ಭಾರಿ ಭೇಟಿ ನೀಡಿದ್ದೇನೆ ಎಂದರು.
ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರ ಕಾರ್ಯ ಉತ್ತಮವಾಗಿ ಸಾಗುತ್ತಿದೆ. ಜಿಲ್ಲೆಯ ಜನರು ನನ್ನ ಕೈ ಬಿಡುವುದಿಲ್ಲ ಎನ್ನುವ ನಂಬಿಕೆ ನನಗಿದೆ. ಅದೇ ರೀತಿ, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಎಲ್ಲಾ ವರ್ಗದವರಿಗೆ ವರದಾನವಾಗಿವೆ. ಇದರಿಂದ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಶಯ ಈಡೇರಿದೆ ಎಂದರು.
ಅದೇ ರೀತಿ, ಶಿವಮೊಗ್ಗದಲ್ಲಿ ಸಮಸ್ಯೆಗಳು ಸಾಕಷ್ಟಿವೆ. ಮುಳುಗಡೆ ಸಂತ್ರಸ್ತರ ಸಮಸ್ಯೆ, ಬಗರ್ ಹುಕುಂ ಸೇರಿದಂತೆ ಕುಡಿಯುವ ನೀರಿನ ಸಮಸ್ಯೆ, ರಸ್ತೆ- ಚರಂಡಿ ಹೀಗೆ ಹತ್ತು ಹಲವು ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದರು.
ನಟ ಶಿವರಾಜ್ ಕುಮಾರ್ ಮಾತನಾಡಿ, ಪತ್ನಿ ಗೀತಾ ಅವರು ರಾಜಕೀಯದಲ್ಲಿ ಗುರುತಿಸಿಕೊಳ್ಳುವ ಮೂಲಕ ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಚಾರ ನಡೆಸಿದ್ದು, ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಪತಿಯಾಗಿ ಅರ್ಧಾಂಗಿಗೆ ಬೆಂಬಲ ಸೂಚಿಸುವುದು ನನ್ನ ಜವಾಬ್ದಾರಿ. ಈ ಬಾರಿ ಚುನಾವಣೆಯ ಫಲಿತಾಂಶ ಗೀತಾ ಪರವಾಗಿರಲಿದೆ ನಂಬಿಕೆ ನನಗಿದೆ ಎಂದರು.