ಬೆಂಗಳೂರು: ಹೊಸ ವರ್ಷದಲ್ಲಿ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡುವುದಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ತಿಳಿಸಿದ್ದಾರೆ.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮನವಿ ಹಿನ್ನಲೆಯಲ್ಲಿ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರಿಗೆ ಬಸ್ ಪಾಸ್ ಜಾರಿ ಸಂಬಂಧ ಹೇಮಂತ್ ನಿಂಬಾಳ್ಕರ್ ಮಾಹಿತಿ ನೀಡಿದ್ದಾರೆ.
ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳಿಂದ ಯೋಜನೆಗೆ ಚಾಲನೆ ನೀಡಲಾಗುವುದು. ಗ್ರಾಮೀಣ ಬಸ್ ಪಾಸ್ ಬಗ್ಗೆ ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಘೋಷಣೆ ಮಾಡಿದ್ದು, ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗಿದೆ. ತಾಲೂಕು ಮಟ್ಟದಲ್ಲಿರುವ ಪತ್ರಕರ್ತರಿಗೂ ಯೋಜನೆ ತಲುಪಿಸಲು ಇಲಾಖೆ ಕ್ರಮ ಕೈಗೊಂಡಿದೆ. ಇದಕ್ಕಾಗಿ ಸಾಫ್ಟ್ವೇರ್ ಅಭಿವೃದ್ಧಿ ಪಡಿಸಲಾಗಿದ್ದು, ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವ ವ್ಯವಸ್ಥೆ ಮಾಡಲಾಗುತ್ತಿದೆ.
ಪತ್ರಕರ್ತರು ವಾರ್ತಾ ಇಲಾಖೆಗೆ ಅರ್ಜಿ ಸಲ್ಲಿಸಬೇಕಿಲ್ಲ. ಆಯಾ ಜಿಲ್ಲಾಮಟ್ಟದಲ್ಲಿ ಉಚಿತವಾಗಿ ಪ್ರಯಾಣಿಸಲು ಬಸ್ ಪಾಸ್ ಪಡೆದುಕೊಳ್ಳುವ ವ್ಯವಸ್ಥೆ ಮಾಡಲಾಗಿದ್ದು, ನಿಯಮಗಳನ್ನು ಸರಳೀಕರಣ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.