ಬೆಂಗಳೂರು: ಮಹದಾಯಿ ಯೋಜನೆಗೆ ವನ್ಯಜೀವಿ ಮಂಡಳಿ ಅನುಮತಿ ನಿರಾಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಅವರು, ಗೋವಾ ವಿದ್ಯುತ್ ಯೋಜನೆಗೆ ವನ್ಯಜೀವಿ ಮಂಡಳಿ ಅನುಮತಿ ನೀಡಿದೆ. 435 ಎಕರೆ ಅರಣ್ಯ ಭೂಮಿ ಬಳಕೆಯಾಗುವ ಗೋವಾ ಯೋಜನೆಗೆ ಅನುಮತಿ ಕೊಟ್ಟಿದ್ದು, ನಮ್ಮ ರಾಜ್ಯದ ಮಹಾದಾಯಿ ಯೋಜನೆಗೆ ಅನುಮತಿ ನೀಡಿಲ್ಲ. ಇದರಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಹೇಳಿದ್ದಾರೆ.
ಗೋವಾದ 400 ಕೆವಿ ವಿದ್ಯುತ್ ಪೂರೈಕೆ ಯೋಜನೆಗೆ ಅನುಮತಿ ನೀಡಲಾಗಿದೆ. ಮಹಾದಾಯಿ ಯೋಜನೆಗೆ ಅನುಮತಿ ನೀಡದಿರುವ ಕುರಿತಾಗಿ ಸಂಪುಟ ಸಭೆಯಲ್ಲಿ ಕಳವಳ ವ್ಯಕ್ತವಾಗಿದೆ. ಈ ಸಂಬಂಧ ಸರ್ವ ಪಕ್ಷ ಸಭೆ ನಡೆಸಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.