ಗೋವಾದ ನಗರಾಭಿವೃದ್ಧಿ ಸಚಿವ ಮತ್ತು ಬಿಜೆಪಿ ಶಾಸಕ ಮಿಲಿಂದ್ ನಾಯಕ್ ಅವರು ಲೈಂಗಿಕ ಶೋಷಣೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ ನಂತರ ರಾಜ್ಯ ಸಂಪುಟಕ್ಕೆ ಬುಧವಾರ ರಾಜೀನಾಮೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿಗಳ ಕಚೇರಿ(CMO) ಬುಧವಾರ ತಡರಾತ್ರಿ ಹೇಳಿಕೆ ನೀಡಿದ್ದು, ನಾಯ್ಕ್ ಅವರು ಮುಕ್ತ ಮತ್ತು ನ್ಯಾಯಯುತ ತನಿಖೆ ಉದ್ದೇಶದಿಂದ ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದೆ. ನಾಯಕ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸಿಎಂಒ ಟ್ವೀಟ್‌ನಲ್ಲಿ ತಿಳಿಸಿದೆ. ರಾಜೀನಾಮೆಯನ್ನು ಸ್ವೀಕರಿಸಿ ರಾಜ್ಯಪಾಲರಿಗೆ ಕಳುಹಿಸಲಾಗಿದೆ.
ದಕ್ಷಿಣ ಗೋವಾದ ಮೊರ್ಮುಗೋವ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಬಿಜೆಪಿ ಶಾಸಕ ಮಿಲಿಂದ್ ನಾಯಕ್ ಸಿಎಂ ಪ್ರಮೋದ್ ಸಾವಂತ್ ನೇತೃತ್ವದ ಸಂಪುಟದಲ್ಲಿ ನಗರಾಭಿವೃದ್ಧಿ ಖಾತೆಯನ್ನು ಹೊಂದಿದ್ದರು. ಅವರು ಅಂದಿನ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ನೇತೃತ್ವದ ಹಿಂದಿನ ಸಂಪುಟದ ಭಾಗವಾಗಿದ್ದರು.
ಕಾಂಗ್ರೆಸ್ ಗೋವಾ ಮುಖ್ಯಸ್ಥ ಗಿರೀಶ್ ಚೋಡಂಕರ್ ಅವರು ನಾಯ್ಕ್ ಅವರು ಕ್ಯಾಬಿನೆಟ್ ಸದಸ್ಯರಾಗಿ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಮಹಿಳೆಯ ಲೈಂಗಿಕ ಶೋಷಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು. ಸಾವಂತ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು. ಅವರ ಮೇಲಿನ ಆರೋಪದ ಬಗ್ಗೆ ಪೊಲೀಸರು ತನಿಖೆ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದ್ದರು.