
ಶಿಗ್ಗಾಂವಿ: ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಸರ್ಕಾರಿ ಅಥವಾ ಖಾಸಗಿ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದರೆ 100 ಗ್ರಾಂ ಚಿನ್ನದ ಪದಕ ನೀಡುವುದಾಗಿ ಘೋಷಿಸಲಾಗಿದೆ.
ಶಿಕ್ಷಣ ಪ್ರೇಮಿ, ಹಂಪಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಮಾಜಿ ಸದಸ್ಯ ಡಾ. ಫಕೀರ ಗೌಡ್ರ ಪಾಟೀಲ ಅವರು 100 ಗ್ರಾಂ ಚಿನ್ನದ ಪದಕ ನೀಡುವುದಾಗಿ ಹೇಳಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ ಶಿಗ್ಗಾಂವಿ ಕ್ಷೇತ್ರದ ವಿದ್ಯಾರ್ಥಿಗೆ 15 ಗ್ರಾಂ ಚಿನ್ನದ ಪದಕ, ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ 20 ಗ್ರಾಂ ಬೆಳ್ಳಿ ಪದಕ ನೀಡಲಾಗುವುದು. ವಿದ್ಯಾರ್ಥಿ ವಿಧಾನಸಭಾ ಕ್ಷೇತ್ರದಲ್ಲಿ 8, 9ನೇ ತರಗತಿ ಓದಿರಬೇಕು. ಶಿಗ್ಗಾಂವಿ ಕ್ಷೇತ್ರದ ವಿದ್ಯಾರ್ಥಿಗಳು ಜಿಲ್ಲೆ ಮತ್ತು ರಾಜ್ಯಮಟ್ಟದಲ್ಲಿ ಹೆಚ್ಚು ಅಂಕ ಗಳಿಸಲಿ ಎಂಬ ಸದ್ದು ಉದ್ದೇಶದಿಂದ ಈ ಬಹುಮಾನ ಘೋಷಿಸಿರುವುದಾಗಿ ಅವರು ತಿಳಿಸಿದ್ದಾರೆ.