ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಹಲವು ಕಡೆ ತಪಾಸಣೆ ನಡೆಸಿದ ವೇಳೆ ಭಾರಿ ಪ್ರಮಾಣದಲ್ಲಿ ಚಿನ್ನಾಭರಣ, ಬೆಳ್ಳಿ, ವಜ್ರ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ.
ರಾಮನಗರ, ದಾವಣಗೆರೆ, ಚಿಕ್ಕಮಗಳೂರಿನಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸ್ಥಾಪಿಸಿದ್ದ ಚೆಕ್ಪೋಸ್ಟ್ ಗಳಲ್ಲಿ ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 41 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ.
ದಾವಣಗೆರೆ ಜಿಲ್ಲೆ ಲೋಕಿಕೆರೆ ಚೆಕ್ ಪೋಸ್ಟ್ ನಲ್ಲಿ ವಾಹನದಲ್ಲಿ ಸಾಗಿಸುತ್ತಿದ್ದ ಸುಮಾರು 12.50 ಕೋಟಿ ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ರಾಮನಗರ ಜಿಲ್ಲೆ ಬಿಡಡಿ ಕಣಿಮಿಣಿಕೆ ಹೆಜ್ಜಾಲ ಚೆಕ್ ಪೋಸ್ಟ್ ನಲ್ಲಿ ವಾಹನಗಳ ತಪಾಸಣೆ ವೇಳೆ 17.50 ಕೋಟಿ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಬೀರೂರು -ಅಜ್ಜಂಪುರ ರಸ್ತೆಯಲ್ಲಿ 9.4 ಕೋಟಿ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ವಶಕ್ಕೆ ಪಡೆಯಲಾಗಿದೆ. ಚುನಾವಣಾ ಅಧಿಕಾರಿಗಳು, ಪೊಲೀಸರು, ವಾಣಿಜ್ಯ ತೆರಿಗೆ ಅಧಿಕಾರಿಗಳು ಚೆಕ್ ಪೋಸ್ಟ್ ಗಳಲ್ಲಿ ವಾಹನ ತಡೆದು ತಪಾಸಣೆ ನಡೆಸಿದ ಸಂದರ್ಭದಲ್ಲಿ ಭಾರಿ ಪ್ರಮಾಣದ ಚಿನ್ನ ವಶಕ್ಕೆ ಪಡೆಯಲಾಗಿದೆ.