ಯಾವುದೇ ಮುನ್ಸೂಚನೆ ನೀಡದೆ ರಾಜ್ಯದಲ್ಲಿ ಪದೇ ಪದೇ ವಿದ್ಯುತ್ ಸ್ಥಗಿತಗೊಳಿಸಲಾಗುತ್ತದೆ ಎಂಬ ಆರೋಪಗಳು ಸಾರ್ವಜನಿಕರಿಂದ ಯಾವಾಗಲೂ ಕೇಳಿ ಬರುತ್ತಿತ್ತು. ಇದೀಗ ಈ ಕುರಿತಂತೆ ಇಂಧನ ಸಚಿವ ಸುನಿಲ್ ಕುಮಾರ್ ಗುಡ್ ನ್ಯೂಸ್ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಮರ್ಪಕ ಹಾಗೂ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು ಎಂಬ ನಿಟ್ಟಿನಲ್ಲಿ ರಾಜ್ಯದ 37 ಕಡೆ ನೂತನ ಉಪ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಒಂದು ವೇಳೆ ಪೂರ್ವ ನಿಶ್ಚಿತವಾಗಿ ವಿದ್ಯುತ್ ಸ್ಥಗಿತಗೊಳಿಸುವುದಾದರೆ ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ.
ಅಲ್ಲದೆ, ವಿವಿಧ ಸರ್ಕಾರಿ ಕಚೇರಿಗಳ ವಿದ್ಯುತ್ ಬಿಲ್ ದೊಡ್ಡ ಪ್ರಮಾಣದಲ್ಲಿ ಬಾಕಿ ಇರುವ ಕಾರಣ, ಇನ್ನು ಮುಂದೆ ಸರ್ಕಾರಿ ಕಚೇರಿಗಳಿಗೆ ಪ್ರಿಪೇಡ್ ಮೀಟರ್ ಅಳವಡಿಸುವ ಕುರಿತು ಚಿಂತನೆ ನಡೆದಿದೆ ಎಂದು ಹೇಳಿದ ಸಚಿವ ಸುನಿಲ್ ಕುಮಾರ್, ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಹೀಗಾಗಿ ನೀರಾವರಿ ಇಲಾಖೆ, ಬಿಬಿಎಂಪಿ ಹಾಗು ಗ್ರಾಮ ಪಂಚಾಯಿತಿಗಳಿಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿತ್ತು. ಗ್ರಾಹಕರಿಗೂ ಹಾಗೂ ಸರ್ಕಾರಿ ಇಲಾಖೆಗೆ ಒಂದೇ ನ್ಯಾಯ ಎಂದು ಸ್ಪಷ್ಟಪಡಿಸಿದರು.