ಬೆಂಗಳೂರು : ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಆಶಾ ಕಾರ್ಯಕರ್ತೆಯರ ಪ್ರೋತ್ಸಾಹಧನ ಪಾವತಿಗೆ ಸೂಚನೆ ನೀಡಿದ್ದಾರೆ.
ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಚರ್ಚಿಸಲು ವಿಕಾಸಸೌಧದಲ್ಲಿ ಸಂಘದ ಪದಾಧಿಕಾರಿಗಳು ಹಾಗು ತಾಂತ್ರಿಕ ಸಮಿತಿಯವರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಆರ್‌ಸಿಹೆಚ್ ಪೋರ್ಟಲ್ ಮೂಲಕ ಆಶಾ ಕಾರ್ಯಕರ್ತರ ಪ್ರೋತ್ಸಾಹಧನ ಪಾವತಿಗೆ ಸಂಬಂಧಿಸಿದಂತೆ ಉಂಟಾಗಿರುವ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ತಾಯಿ-ಮಗುವಿನ ಆರೈಕೆ, ಆರೋಗ್ಯದ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವುದು ಸೇರಿದಂತೆ ಮನೆ ಬಾಗಿಲಿಗೆ ಆರೋಗ್ಯ ಸೇವೆಯನ್ನು ಒದಗಿಸುತ್ತಿರುವ ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದ್ದುಈ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.