
ಬೆಳಗಾವಿ : ರಾಜ್ಯದ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ನೋಂದಾಯಿಸಿಕೊಂಡು ಸೌಲಭ್ಯ ಪಡೆಯದ ಅರ್ಹ ಫಲಾನುಭವಿಗಳಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಅರ್ಹ ಫಲಾನುಭವಿಗಳಿಗೆ ಶೀಘ್ರವೇ ಸೌಲಭ್ಯ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಗಳಲ್ಲಿ ನೋಂದಾಯಿಸಿಕೊಂಡು ಸೌಲಭ್ಯ ದೊರಕದ ಅರ್ಹ ಕೆಲವು ಫಲಾನುಭವಿಗಳಿಗೆ ಸೌಲಭ್ಯ ದೊರಕಲು ಇರುವ ತಾಂತ್ರಿಕ ಅಡಚಣೆಗಳನ್ನು ಶೀಘ್ರವೇ ನಿವಾರಿಸಬೇಕು. ಜೊತೆಗೆ ಅಧಿವೇಶನ ನಡೆಯುವ ಸಂದರ್ಭದಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು, ಸಲಹೆ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.
ಇನ್ನು ರೈತರಿಗೆ ಮೊದಲ ಹಂತದಲ್ಲಿ ೨,೦೦೦ ರೂ. ವರೆಗೆ ನೀಡಲು ಘೋಷಿಸಿಉರವ ಪರಿಹಾರವನ್ನು ತ್ವರಿತವಾಗಿ ವಿತರಿಸಲು ಮಾರ್ಗಸೂಚಿಗಳನ್ನು ರೂಪಿಸಿ ಡಿಬಿಟಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.