alex Certify ಡಿಪ್ಲೋಮಾ, ಪದವೀಧರರಿಗೆ ಗುಡ್‌ ನ್ಯೂಸ್‌ : ಜ. 12ರಂದು ʻಯುವನಿಧಿʼ ಯೋಜನೆಗೆ ಸಿಎಂ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಪ್ಲೋಮಾ, ಪದವೀಧರರಿಗೆ ಗುಡ್‌ ನ್ಯೂಸ್‌ : ಜ. 12ರಂದು ʻಯುವನಿಧಿʼ ಯೋಜನೆಗೆ ಸಿಎಂ ಚಾಲನೆ

ಶಿವಮೊಗ್ಗ : ಡಿಪ್ಲೋಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗಭತ್ಯೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಜನವರಿ 12ರಂದು ನಗರದ ಫ್ರೀಡಂಪಾರ್ಕ್‍ನ ಭವ್ಯ ವೇದಿಕೆಯಲ್ಲಿ ಚಾಲನೆ ನೀಡಲಾಗುವುದು. ಅದಕ್ಕಾಗಿ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ್ ಅವರು ಹೇಳಿದರು.

 ಅವರು ಇಂದು ಜಿಲ್ಲಾಡಳಿತ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ಹಾವೇರಿ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಶಿವಮೊಗ್ಗ ಜಿಲ್ಲೆಯ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳಿಗಾಗಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಡಿಪ್ಲೋಮಾ ಮತ್ತು ಪದವೀಧರ ನಿರುದ್ಯೋಗಿ ಯುವಕರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದ್ದು, ಬರುವವರಿಗಾಗಿ ವೇದಿಕೆಯ ಸಿದ್ಧತೆ, ಆಸನ ವ್ಯವಸ್ಥೆ, ವಾಹನ ನಿಲುಗಡೆ, ಊಟೋಪಹಾರ ಹಾಗೂ ಮೂಲಭೂತ ವ್ಯವಸ್ಥೆ ಒದಗಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

 ಶಿವಮೊಗ್ಗ ಹಾಗೂ ನೆರೆಯ ಜಿಲ್ಲೆಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಯುವ ವಿದ್ಯಾರ್ಥಿಗಳನ್ನು ಸಮಾರಂಭ ಸ್ಥಳಕ್ಕೆ ಕರೆತರಲು ರಸ್ತೆ ಸಾರಿಗೆ ನಿಗಮ ಮತ್ತ ಖಾಸಗಿ ಒಡೆತನದ ಸುಮಾರು 800-100ಬಸ್ಸುಗಳ ಅಗತ್ಯವಿರುವುದನ್ನು ಅಂದಾಜಿಸಲಾಗಿದೆ. ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಾಗುವವರು ಹಾಗೂ ಅಂತಿಮ ವರ್ಷದ ಸೆಮಿಸ್ಟರ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಡಿಪ್ಲೋಮಾ, ಪದವಿ ಕಾಲೇಜುಗಳ ಪ್ರಶಿಕ್ಷಣಾರ್ಥಿಗಳನ್ನು ನಿರೀಕ್ಷಿಸಲಾಗುತ್ತಿದೆ. ನಂತರ ಜಿಲ್ಲೆಯ ಗಡಿಭಾಗಕ್ಕೆ ಹೊಂದಿಕೊಂಡಂತಿರುವ ಹತ್ತಿರದ ತಾಲೂಕುಗಳ ವಿದ್ಯಾರ್ಥಿಗಳನ್ನು ಕರೆತರಲು ವಾಹನ ಸೌಲಭ್ಯ ಒದಗಿಸಲಾಗುವುದು. ವಿಶೇಷವಾಗಿ ಶಿವಮೊಗ್ಗ ಜಿಲ್ಲೆಯಿಂದಲೇ ಬಹುಸಂಖ್ಯೆಯ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ ಎಂದರು.

ಈಗಾಗಲೇ ಯುವನಿಧಿ ಯೋಜನೆಯ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ರಾಜ್ಯದ ಎಲ್ಲಾ ಫಲಾನುಭವಿಗಳಿಗೂ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮೊಬೈಲ್ ಸಂದೇಶ ಕಳುಹಿಸಲು ಉದ್ದೇಶಿಸಲಾಗಿದೆ. ವಿವಿಧ ಸ್ಥಳಗಳಿಂದ ಕಾರ್ಯಕ್ರಮಕ್ಕೆ ಹೊರಡುವ ವಿದ್ಯಾರ್ಥಿಗಳನ್ನು ನೋಡಿಕೊಳ್ಳಲು ಪ್ರತಿ ಬಸ್ ಒಂದಕ್ಕೆ ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು. ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳ ಯೋಗಕ್ಷೇಮ ಮತ್ತು ಜವಾಬ್ದಾರಿ ತೆಗೆದುಕೊಳ್ಳುವಂತೆ ಅವರು ಸೂಚಿಸಿದರು.

ಕಾರ್ಯಕ್ರಮದ ಅಂತಿಮ ಸ್ವರೂಪ ಮತ್ತು ಮೇಲ್ವಿಚಾರಣೆಗಾಗಿ ಕಾಲಕಾಲಕ್ಕೆ ಸಭೆಗಳನ್ನು ನಡೆಸಿ, ಸೂಕ್ತ ಮಾರ್ಗದರ್ಶನ ನೀಡಲಾಗುವುದು ಎಂದರು.

 ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯ ಯುವನಿಧಿ ಯೋಜನೆಯ ವಿದ್ಯಾವಂತ ನಿರುದ್ಯೋಗಿ ಫಲಾನುಭವಿಗಳಲ್ಲದೇ, ಅಂತಿಮ ವರ್ಷಗಳ ಸೆಮಿಸ್ಟರ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಡಿಪ್ಲೋಮಾ, ಪದವಿ ಮತ್ತು ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದೆ. ಕಾರ್ಯಕ್ರಮದ ವ್ಯವಸ್ಥಿತ ಆಯೋಜನೆಗಾಗಿ ಅಧಿಕಾರಿಗಳ ತಂಡಗಳನ್ನು ನಿಯೋಜಿಸಲಾಗುವುದು.     – ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ.

ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳನ್ನು ಕರೆತರಲು ಸಾಕಷ್ಟು ಬಸ್ ವ್ಯವಸ್ಥೆ ಕಲ್ಪಿಸಲಾಗುವುದು. ಪ್ರತಿ ಬಸ್‍ಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದಲ್ಲದೇ, ಸುರಕ್ಷತೆಯ ದೃಷ್ಟಿಯಿಂದ ಪ್ರತಿ ವಿದ್ಯಾರ್ಥಿಯ ಹೆಸರು ಮತ್ತು ಮೊ.ನಂ. ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.  _ ಡಾ|| ಎಂ.ಸಿ.ಸುಧಾಕರ್, ಉನ್ನತ ಶಿಕ್ಷಣ ಸಚಿವರು.

ಪೂರ್ವಸಿದ್ಧತಾ ಸಭೆಯಲ್ಲಿ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಮತ್ತು  ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಪಂಚಾಯತ್‍ರಾಜ್ ಇಲಾಖೆಯ ಶ್ರೀಮತಿ ಉಮಾ ಮಹದೇವನ್, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದ ಆಯುಕ್ತೆ ಡಾ.ರಾಗಪ್ರಿಯಾ ಆರ್., ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್‍ಕುಮಾರ್ ಜಿ.ಕೆ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ಸೇರಿದಂತೆ ಚಿಕ್ಕಮಗಳೂರು, ಉಡುಪಿ, ಚಿತ್ರದುರ್ಗ ಮತ್ತು ಹಾವೇರಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...