ಮೈಸೂರು: ಆಗಸ್ಟ್ 30 ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದು, ಅದೇ ದಿನ ಮಹಿಳೆಯರ ಖಾತೆಗೆ 2,000 ರೂ. ಜಮಾ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
1,09,54,000 ಮಹಿಳೆಯರ ಖಾತೆಗೆ ತಲಾ 2000 ರೂ. ಜಮಾ ಮಾಡಲಾಗುವುದು. ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಜಿಲ್ಲೆಯಲ್ಲಿ 13,81,430 ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಆಗಸ್ಟ್ 30 ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುತ್ತದೆ. ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಮೊದಲಾದವರು ಭಾಗವಹಿಸಲಿದ್ದಾರೆ.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವೇದಿಕೆ ನಿರ್ಮಾಣ ಕಾಮಗಾರಿಯನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವೀಕ್ಷಿಸಿದ್ದಾರೆ. ಸಚಿವ ಡಾ.ಹೆಚ್.ಸಿ. ಮಹದೇವಪ್ಪ, ಶಾಸಕರಾದ ಕೆ. ಹರೀಶ್ ಗೌಡ, ಡಿ. ರವಿಶಂಕರ್, ದರ್ಶನ್ ಧ್ರುವನಾರಾಯಣ ಮತ್ತಿತರರು ಉಪಸ್ಥಿತರಿದ್ದರು.