ಬೆಂಗಳೂರು : 15 ದಿನಗಳಲ್ಲಿ ಬೆಳೆಹಾನಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ರಾಜ್ಯದಲ್ಲಿ ಅಕ್ಟೋಬರ್ ತಿಂಗಳಲ್ಲಿ ಸರಾಸರಿ 10.4 ಸೆಂ.ಮೀ. ವಾಡಿಕೆ ಮಳೆ ಆಗಬೇಕಿತ್ತು. ಆದರೆ 16.6 ಸೆಂ.ಮೀ. ಮಳೆ ಸುರಿದಿದೆ. ಅಂದಾಜು 56,993 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾನಿಗೀಡಾಗಿದೆ. ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಜಂಟಿ ಸಮೀಕ್ಷೆ ಇನ್ನು 3 – 4 ದಿನಗಳಲ್ಲಿ ಪೂರ್ಣಗೊಳ್ಳಲಿದ್ದು, 15 ದಿನಗಳಲ್ಲಿ ಪರಿಹಾರ ವಿತರಿಸುತ್ತೇವೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ರಾಜ್ಯದಲ್ಲಿ ಸುರಿದ ಸತತ ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಆಗಿರುವ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಡಿಯೋ ಸಂವಾದ ನಡೆಸಿ, ಮಾಹಿತಿ ಪಡೆದು, ಪರಿಹಾರ ಕಾರ್ಯಗಳ ಶೀಘ್ರ ಅನುಷ್ಠಾನಕ್ಕೆ ಸೂಚನೆ ನೀಡಿದರು.