ಬೆಂಗಳೂರು : ರಾಜ್ಯ ಸರ್ಕಾರವು ಅಕ್ರಮ ಸಾಗುವಳಿ ಮಾಡುವವರಿಗೆ ಸಿಹಿಸುದ್ದಿ ನೀಡಿದ್ದು, ಬಗರ್ ಹುಕುಂ ಸಾಗುವಳಿದಾರರಿಗೆ ಭೂಒಡೆತನದ ಹಕ್ಕನ್ನು ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ಒಂದೂವರೆ ದಶಕಕ್ಕಿಂತ ಹೆಚ್ಚು ಕಾಲ ಸಾಗುವಳಿ ಮಾಡಿದ ಬಗರ್ ಹುಕುಂ ಭೂಮಿಯನ್ನು ಸಕ್ರಮಗೊಳಿಸಿ, ಭೂಒಡೆತನದ ಹಕ್ಕನ್ನು ರೈತರಿಗೆ ನೀಡಲಾಗುವುದು. ಪ್ರತಿಯೊಬ್ಬ ರೈತನು ಸ್ವಂತ ಭೂಮಿಯಲ್ಲಿ ಶ್ರಮದ ಮೂಲಕ ನೆಮ್ಮದಿಯ ಬದುಕು ಕಟ್ಟಿಕೊಳ್ಳಲಿ ಎಂಬುದು ನಮ್ಮ ಆಶಯವಾಗಿದೆ ಎಂದು ತಿಳಿಸಿದ್ದಾರೆ.
ಕೃಷಿಯನ್ನು ಲಾಭದಾಯಕ ಉದ್ಯೋಗವಾಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂಬ ವಾಗ್ದಾನವನ್ನು ರಾಷ್ಟ್ರೀಯ ರೈತರ ದಿನದ ಸಂದರ್ಭದಲ್ಲಿ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಅಕ್ರಮ -ಸಕ್ರಮ ಯೋಜನೆ ಅಡಿ ಸಾಗುವಳಿ ಚೀಟಿ ನೀಡುವಂತೆ ಸಾವಿರಾರು ರೈತರು ಅರ್ಜಿ ಸಲ್ಲಿಸಿದ್ದು, ಈ ಅರ್ಜಿಗಳು ವಿಲೇವಾರಿಯಾಗದೆ ರೈತರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಎಲ್ಲಾ ಅರ್ಜಿಗಳನ್ನು ಮುಂದಿನ ಆರು ತಿಂಗಳೊಳಗೆ ಬಾಕಿ ಇಲ್ಲದಂತೆ ವಿಲೇವಾರಿ ಮಾಡಿ ಅರ್ಹರಿಗೆ ಸಾಗುವಳಿ ಚೀಟಿ ನೀಡಲಾಗುವುದು ಎಂದು ತಿಳಿಸಿದ್ದಾರೆ.