alex Certify ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ಖಾತೆಗೆ ಬರ ಪರಿಹಾರ ಹಣ ಜಮಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ಖಾತೆಗೆ ಬರ ಪರಿಹಾರ ಹಣ ಜಮಾ

ಬಳ್ಳಾರಿ ಬೆಳೆ ವಿಮೆ ಪರಿಹಾರಕ್ಕೆ ಸಂಬಂಧಪಟ್ಟಂತೆ, ಕೇಂದ್ರ ಕೃಷಿ ಸಚಿವರೊಂದಿಗೆ ಈಗಾಗಲೇ ಸಭೆ ನಡೆಸಿದ್ದು, ರೈತರಿಗೆ ಶೀಘ್ರದಲ್ಲಿ ಬರ ಪರಿಹಾರ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಅವರು, ಮಂಗಳವಾರದಂದು ಜಿಲ್ಲೆಯ ಸಂಡೂರು ತಾಲ್ಲೂಕಿನ ಕೋಡಾಲು ಹಾಗೂ ರಾಜಾಪುರ ಗ್ರಾಮಗಳ ವ್ಯಾಪ್ತಿಯ ರೈತರ ಹತ್ತಿ, ನವಣೆ ಮತ್ತು ಸಜ್ಜೆ ಜಮೀನುಗಳಿಗೆ ಭೇಟಿ ನೀಡಿ, ಮಳೆ ಇಲ್ಲದೆ ಅನಾವೃಷ್ಠಿಯಿಂದ ಹಾಳಾಗಿರುವ ಬೆಳೆ ಹಾನಿ ಪರಿಶೀಲನೆ ನಡೆಸಿದರು.

ಸಂಡೂರು ತಾಲ್ಲೂಕಿನ ಕೋಡಾಲು ಗ್ರಾಮ ವ್ಯಾಪ್ತಿಯ ರೈತ ಮಾರೆಪ್ಪನ ನವಣೆ, ಹತ್ತಿ ಬೆಳೆ ವೀಕ್ಷಣೆ ಮಾಡಿ, ಬೆಳೆ ಹಾನಿ ಕುರಿತು ಅಧಿಕಾರಿಗಳು ಹಾಗೂ ರೈತರಿಂದ ಮಾಹಿತಿ ಪಡೆದುಕೊಂಡರು.

ಫೂಟ್ಸ್ ಐಡಿಯಲ್ಲಿ ರೈತರು ತಮ್ಮ ಹೆಸರಿನಲ್ಲಿರುವ ಎಲ್ಲ ಜಮೀನನ್ನು ನೋಂದಣಿ ಮಾಡಿಸಬೇಕು. ಇದರಿಂದ ಬರ ಪರಿಹಾರಕ್ಕೆ ಅನುಕೂಲವಾಗಲಿದೆ ಎಂದು ರೈತರಿಗೆ ಮನವಿ ಮಾಡಿದರು.

ಈಗಾಗಲೇ ರಾಜ್ಯದ ಬರ ಪರಿಸ್ಥಿತಿಯ ಕುರಿತು, ಕಂದಾಯ ಸಚಿವ ಕೃಷ್ಣ ಭೈರೇಗೌಡ ಹಾಗೂ ತಾವು ದೆಹಲಿಗೆ ತೆರಳಿ, ಕೇಂದ್ರದ ಕೃಷಿ ಸಚಿವರ ಜೊತೆ ಸಭೆ ನಡೆಸಿ, ಕೇಂದ್ರ ಸರ್ಕಾರಕ್ಕೆ ಇಲ್ಲಿನ ಬರ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಈ ತಿಂಗಳ ಅಂತ್ಯದಲ್ಲಿ ಕೇಂದ್ರ ಸರ್ಕಾರವು ಬರ ಪರಿಹಾರದ ಹಣ ಬಿಡುಗಡೆ ಮಾಡಲಿದೆ ಎಂಬ ನಿರೀಕ್ಷೆ ಇದೆ ಎಂದು ಕೃಷಿ ಸಚಿವ ಎನ್.ಚಲುವನಾರಾಯಣಸ್ವಾಮಿ ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಕೇಂದ್ರದಿಂದ ಬರ ಪರಿಹಾರ ಬಂದ ತಕ್ಷಣ, ಸಣ್ಣ ಮತ್ತು ಅತಿ ಸಣ್ಣ ರೈತರ ಭೂಮಿಯನ್ನು ಇಂತಿಷ್ಟು ಹಾನಿ ಎಂದು ಪರಿಗಣಿಸಿ, ಫ್ರೂಟ್ಸ್ ತತ್ರಾಂಶದ ಮೂಲಕ ನೇರವಾಗಿ ರೈತರಿಗೆ ಬರ ಪರಿಹಾರವನ್ನು ನೀಡಲಾಗುತ್ತದೆ ಎಂದು ವಿವರಿಸಿದರು.

ಸಂಡೂರು ಶಾಸಕ ಈ.ತುಕಾರಾಂ ಅವರು ಮಾತನಾಡಿ, ಈ ಭಾಗದಲ್ಲಿ ಅತಿ ಹೆಚ್ಚು ಬರ ಹಿನ್ನಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಕುಡಿಯುವ ನೀರಿನ ಟ್ಯಾಂಕರ್ ವ್ಯವಸ್ಥೆ, ಕ್ಲಿನಿಕ್ ಆನ್ ವೀಲ್ ಮುಖಾಂತರ ಆರೋಗ್ಯ ಸೇವೆ ಸೇರಿದಂತೆ ಇತರೆ ಸೇವೆ ಒದಗಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಕೃಷಿ ಜಂಟಿ ನಿರ್ದೇಶಕ ಕೆ.ಮಲ್ಲಿಕಾರ್ಜುನ, ಉಪ ನಿರ್ದೇಶಕ ಕೆಂಗೆಗೌಡ, ತೋಟಗಾರಿಕೆ ಉಪನಿರ್ದೇಶಕ ಸಂತೋಷ್ ಸಪ್ಪಂಡಿ, ತಹಶೀಲ್ದಾರ ಪವನ್ ಕುಮಾರ್, ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕ ಮಂಜುನಾಥ, ತೋಟಗಾರಿಕೆ ಸಹಾಯಕ ನಿರ್ದೇಶಕ ಹನುಮಂತಪ್ಪ ನಾಯ್ಕ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ರೈತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...