ಬೆಂಗಳೂರು : ರೈತ ಸಮುದಾಯಕ್ಕೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದ 106 ತಾಲೂಕುಗಳಲ್ಲಿ ಕೃಷಿಭಾಗ್ಯ ಯೋಜನೆ ಮರು ಜಾರಿಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಕೃಷಿ ಭಾಗ್ಯ ಯೋಜನೆಯಡಿ 100 ಕೋಟಿ ರೂ. ವೆಚ್ಚದಲ್ಲಿ 106 ತಾಲೂಕುಗಳ ವ್ಯಾಪ್ತಿಯಲ್ಲಿ ಕೃಷಿ ಹೊಂಡ ನಿರ್ಮಾಣ ಸೇರಿದಂತೆ ವಿವಿಧ ಕೃಷಿ ಪ್ರೋತ್ಸಾಹ ಚಟುವಟಿಕೆಗಳನ್ನು ಒಳಗೊಂಡ ಕೃಷಿ ಭಾಗ್ಯ ಯೋಜನೆ ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದ ಮೊದಲ ಅವಧಿಯಲ್ಲಿ ಜಾರಿ ಮಾಡಲಾಗಿದ್ದ ಕೃಷಿ ಭಾಗ್ಯ ಯೋಜನೆಯನ್ನು ನಂತರ ಬಿಜೆಪಿ ಸರ್ಕಾರ ಸ್ಥಗಿತಗೊಳಿಸಿತ್ತು. ಇದೀಗ ಮತ್ತೆ ಸಿದ್ದರಾಮಯ್ಯ ಯೋಜನೆ ಮರು ಜಾರಿಗೆ ಮುಂದಾಗಿದ್ದಾರೆ.
ಇನ್ನು ಕೃಷಿ ಯಂತ್ರಧಾರೆ ಯೋಜನೆಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ರಾಜ್ಯಾದ್ಯಂತ 100 ಹೈಟೆಕ್ ಹಾರ್ವೆಸ್ಟರ್ ಹಬ್ ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಪ್ರತಿ ಘಟಕಕ್ಕೆ 1 ಕೋಟಿ ರೂ. ಮೀರದಂತೆ ಶೇ. 70 ರಷ್ಟು ಸಹಾಯಧನ ನೀಡಲಾಗುವುದು. ಹಾರ್ವೆಸ್ಟರ್ ಹಬ್ ಸ್ಥಾಪಿಸಿ ಹೈಟೆಕ್ ಕೃಷಿ ಯಂತ್ರಗಳನ್ನು ಬಾಡಿಗೆ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.