ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಇಂದು ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ ನೀಡಲಿದ್ದಾರೆ.
ಯೋಜನೆಯ ಉಚಿತ ಲಾಭ ಪಡೆದುಕೊಳ್ಳಲು ಸಹಾಯವಾಣಿ ಸಂಖ್ಯೆ ಆರಂಭಿಸಲಾಗಿದೆ. 8147500500 ಕ್ಕೆ ಪಡಿತರ ಚೀಟಿ ಸಂಖ್ಯೆ ಎಸ್ಎಂಎಸ್ ಮಾಡಿದಲ್ಲಿ ನೋಂದಣಿ ಸ್ಥಳ, ಗೊತ್ತುಪಡಿಸಿದ ದಿನಾಂಕ, ಸಮಯದ ಸಂದೇಶ ರವಾನೆ ಆಗುತ್ತದೆ.
ಗೊಂದಲವಿದ್ದರೆ 1902 ನಂಬರ್ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಉದ್ದೇಶ:
ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರವು ಅನೇಕ ಯೋಜನೆಗಳನ್ನು ಹಮ್ಮಿಕೊಂಡಿರುತ್ತದೆ. ಕುಟುಂಬದ ನಿರ್ವಹಣೆಯಲ್ಲಿ ಕುಟುಂಬದ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ನಿರ್ವಹಣೆಯು ಉತ್ತಮ ಗುಣಮಟ್ಟದಲ್ಲಿರುತ್ತದೆ. ಆದ್ದರಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000-00ಗಳನ್ನು ನೀಡುವ ಗ್ರಹಲಕ್ಷ್ಮಿ ಯೋಜನೆಯನ್ನು 2023-24ನೇ ಸಾಲಿನಿಂದ ಜಾರಿಗೆ ತರಲಾಗಿದೆ.
ಗ್ರಹಲಕ್ಷ್ಮಿ ಯೋಜನೆಯು ಕರ್ನಾಟಕ ರಾಜ್ಯದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಿಂದ ವಿತರಿಸಿರುವ ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಗೆ ಮಾತ್ರ ಅನ್ವಯವಾಗುತ್ತದೆ.
ಯೋಜನೆಯ ಸೌಲಭ್ಯ ಪಡೆಯಲು ಪ್ರಮುಖ ಅರ್ಹತೆಗಳು:
1. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
2. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗುವುದಿಲ್ಲ.
3. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪ್ರತಿ ಜಿಎಸ್ಟಿ ರಿಟರ್ನ್ಸಲ್ಲಿಸುವವರಾಗಿದ್ದಲ್ಲಿ ಅರ್ಹರಾಗುವುದಿಲ್ಲ.
ಯೋಜನೆಯಡಿ ನೋಂದಾಯಿಸಲು ಬೇಕಾದ ದಾಖಲಾತಿಗಳು:
1. ಪಡಿತರ ಚೀಟಿಯ ಸಂಖ್ಯೆ
2. ಯಜಮಾನಿಯ ಹಾಗೂ ಯಜಮಾನಿ ಪತಿಯ ಆಧಾರ್ ಕಾರ್ಡ್ ಸಂಖ್ಯೆ, 3. ಯಜಮಾನಿಯ ಆಧಾರ್ಗೆ ಜೋಡಣೆಯಾಗಿರುವ ಬ್ಯಾಂಕ್ ಖಾತೆಯ ಫಲಾನುಭವಿಯು ಇಚ್ಛಿಸುವ ಪರ್ಯಾಯ ಬ್ಯಾಂಕ್ ಖಾತೆಯ ವಿವರ.
ನೋಂದಣಿ ವಿಧಾನ:
1. ಫಲಾನುಭವಿಗಳು, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರ ಮೂಲಕ ಸೇವಾಸಿಂಧು ಪೋರ್ಟಲ್ನಲ್ಲಿ ಉಚಿತವಾಗಿ ನೋಂದಾಯಿಸಿ ಕೊಳ್ಳಬಹುದು.
2. ಫಲಾನುಭವಿಗಳು ಮೇಲ್ಕಾಣಿಸಿದ ಕೇಂದ್ರಗಳಲ್ಲದ “ಪ್ರಜಾ ಪ್ರತಿನಿಧಿ” (citizen volunteers) ಮೂಲಕ ಸಹ ಸೇವಾಸಿಂಧು ಪೋರ್ಟಲ್ನಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು.
3. ಪತಿ ಫಲಾನುಭವಿಯ ನೋಂದಾವಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902ಕ್ಕೆ ಕಾಲ್ ಮಾಡಿ ಅಥವಾ 8147500500 ನಂಬರ್ಗೆ SMS ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದಾಗಿದೆ.
4. ನಿಗಧಿತ ಸಮಯಕ್ಕೆ ಭೇಟಿ ನೀಡಿ ನೋಂದಾವಣೆ ಮಾಡಿಕೊಳ್ಳಲು ಸಾಧ್ಯವಾಗದೆಯಿದ್ದಲ್ಲಿ, ಅದೇ ಕೇಂದ್ರಕ್ಕೆ ಮುಂದಿನ ಯಾವುದೇ ದಿನಗಳಲ್ಲಿ ಕಛೇರಿ ಸಮಯದ ನಂತರ (ಸಂಜೆ 5.00 ಗಂಟೆ ನಂತರ) ತೆರಳಿ ನೋಂದಾಯಿಸಿಕೊಳ್ಳಬಹುದು.
5. ಅನುಮೋದಿಸಲ್ಪಟ್ಟ ಅರ್ಹ ಫಲಾನುಭವಿಗಳಿಗೆ ಮಂಜೂರಾತಿ ಪತ್ರವನ್ನು ನೀಡಲಾಗುವುದು.
6. ಯೋಜನೆಯಡಿ ನೋಂದಾಯಿಸುವ ಫಲಾನುಭವಿಯು ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ. 7. ಯೋಜನೆಯಡಿ ನೋಂದಾಯಿಸಿಕೊಳ್ಳಲು ಯಾವುದೇ ಅಂತಿಮ ದಿನಾಂಕ ಮತ್ತು ಸಮಯ ನಿಗದಿ ಪಡಿಸಿರುವುದಿಲ್ಲ.