ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 660 ಪಿಡಿಒ, 604 ಗ್ರೇಡ್ 1 ಕಾರ್ಯದರ್ಶಿ ಹಾಗೂ 719 ಗ್ರೇಡ್-2 ಕಾರ್ಯದರ್ಶಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ.
ವಿಧಾನಪರಿಷತ್ ನಲ್ಲಿ ಜೆಡಿಎಸ್ ನ ಮರಿತಿಬ್ಬೇಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯದ ಗ್ರಾಮಪಂಚಾಯಿತಿಗಳಲ್ಲಿ ಖಾಲಿ ಇರುವ 660 ಪಿಡಿಒ, 604 ಗ್ರೇಡ್ 1 ಕಾರ್ಯದರ್ಶಿ ಹಾಗೂ 719 ಗ್ರೇಡ್-2 ಕಾರ್ಯದರ್ಶಿ ಹುದ್ದೆಗಳು ಖಾಲಿ ಇವೆ. ಅವುಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಮೊದಲ ಹಂತದಲ್ಲಿ 150 ಪಿಡಿಒಗಳ ನೇಮಕಕ್ಕೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ಉಳಿದ 510 ಪಿಡಿಒಗಳ ನೇಮಕಕ್ಕೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಬೇರೆ ಇಲಾಖೆಗಳಲ್ಲಿ ಹಾಗೂ ಸ್ಥಳಗಳಿಗೆ ಯೋಜನೆ ಮೇಲೆ ನೇಮಕವಾಗಿರುವ ಗ್ರಾಮಪಂಚಾಯಿತಿ ಸೇರಿದಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿ ಅಧಿಕಾರಿಗಳನ್ನು ವಾಪಸ್ ಮಾತೃ ಇಲಾಖೆಗೆ ಕರೆಸಿಕೊಳ್ಳಲು ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.