ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, SC, ST ಬ್ಯಾಕ್ ಲಾಗ್ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರ ಸಂಪುಟ ಉಪಸಮಿತಿ ರಚನೆ ಮಾಡಿದೆ.
SC, ST ಬ್ಯಾಕ್ ಲಾಗ್ ಹುದ್ದೆ ಭರ್ತಿಗೆ ಸಮಾಜಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ನೇತೃತ್ವದ ಸಮಿತಿ ರಚನೆ ಮಾಡಲಾಗಿದೆ. ಸಮಿತಿಯ ಸದಸ್ಯರಾಗಿ ಡಾ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ನಾಗೇಂದ್ರ, ಹೆಚ್.ಕೆ.ಪಾಟೀಲ್, ಸತೀಶ್ ಜಾರಕಿಹೊಳಿ, ಶಿವರಾಜ ತಂಗಡಗಿ ನೇಮಕ ಮಾಡಲಾಗಿದೆ.
ಮುಂದಿನ 6 ತಿಂಗಳಲ್ಲಿ ಎಲ್ಲಾ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಹೈಕೋರ್ಟ್ ಆದೇಶ ಹೊರಡಿಸಿತ್ತು, ಪರಿಶಿಷ್ಟ ಜಾತಿ, ಪಂಗಡದವರಿಗೆ ಮೀಸಲಾಗಿರುವ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರಿ ಸೇವೆಯಲ್ಲಿ ಆ ಸಮುದಾಯಗಳಿಗೆ ಕಲ್ಪಿಸಿದ ಪ್ರಾತಿನಿಧ್ಯ ಕಸಿದುಕೊಂಡಂತೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಮುಂದಿನ ಆರು ತಿಂಗಳ ಅವಧಿಯಲ್ಲಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆ ಮತ್ತು ಸಂಸ್ಥೆಗಳಲ್ಲಿನ ಬ್ಯಾಕ್ ಲಾಗ್ ಹುದ್ದೆಗಳನ್ನು ಸಮರೋಪಾದಿಯಲ್ಲಿ ಭರ್ತಿ ಮಾಡಬೇಕೆಂದು ಕೋರ್ಟ್ ಇತ್ತೀಚೆಗೆ ಮಹತ್ವದ ತೀರ್ಪು ನೀಡಿತ್ತು.
ಎಸ್ಸಿ, ಎಸ್ಟಿ ಪಂಗಡಗಳಿಗೆ ಮೀಸಲಾದ ಹುದ್ದೆಗಳನ್ನು ಭರ್ತಿ ಮಾಡಬೇಕು. ಈ ಹುದ್ದೆಗಳನ್ನು ಖಾಲಿ ಉಳಿಸಿಕೊಳ್ಳುವುದು ಸಂವಿಧಾನ ಈ ಸಮುದಾಯಗಳಿಗೆ ಕಲ್ಪಿಸಿದ ಸೌಲಭ್ಯ ನಿರಾಕರಿಸಿದಂತಾಗುತ್ತದೆ. ಹಾಗಾಗಿ ಸರ್ಕಾರದ ಎಲ್ಲ ಇಲಾಖೆ ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳನ್ನು ಮುಂದಿನ ಆರು ತಿಂಗಳ ಒಳಗೆ ಭರ್ತಿ ಮಾಡಬೇಕು ಎಂದು ಹೈಕೋರ್ಟ್ ಆದೇಶ ನೀಡಿತ್ತು.