ಬೆಳಗಾವಿ : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಸೇರಿ 924 ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಕುರಿತು ಮಾಹಿತಿನೀಡಿರುವ ಸಚಿವರು, ನೇರ ನೇಮಕಾತಿ ಕೋಟಾದಡಿ ಖಾಲಿಯಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೃಂದದ 256 ಹುದ್ದೆಗಳು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-1 ವೃಂದದ 220 ಹುದ್ದೆಗಳು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-2 ವೃಂದದ 343 ಹುದ್ದೆಗಳು ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ವೃಂದದ 105 ಹುದ್ದೆಗಳಿಗೆ ನೇಮಕಾತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೃಂದಕ್ಕೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗೇಡ್-1 ವೃಂದದ ಅರ್ಹ ನೌಕರರು ಲಭ್ಯವಾದಂತೆ ಜೇಷ್ಠತೆ ಮತ್ತು ಅರ್ಹತೆ ಆಧಾರದ ಮೇಲೆ ಮುಂಬಡ್ತಿ ನೀಡಲು ಕ್ರಮ ವಹಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-1. ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್ -2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ವೃಂದಕ್ಕೆ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ (ಅಭಿವೃದ್ಧಿ) ರವರು ನೇಮಕಾತಿ ಪ್ರಾಧಿಕಾರ ಆಗಿದ್ದು ಖಾಳಿ ಹುದ್ದೆಗೆ ಎದುರಾಗಿ ಮುಂಬಡ್ತಿ / ಸೇವೆಯೊಳಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದಿಂದ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.