ಬಳ್ಳಾರಿ : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಾಜ್ಯದಲ್ಲಿ ಶೀಘ್ರವೇ 2000 ಲೈನ್’ಮೆನ್ಗಳ ನೇಮಕಾತಿ ಮಾಡಲಾಗುತ್ತದೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿದ್ದಾರೆ.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಇಲಾಖೆ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ 2000 ಲೈನ್ಮೆನ್ಗಳ ನೇಮಕಕ್ಕೆ ಇನ್ನು 15 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುತ್ತದೆ. ಸಾಮಾನ್ಯವಾಗಿ ಲೈನ್ಮೆನ್ಗಳ ನೇಮಕ ವೇಳೆ ಒಂದು ಜಿಲ್ಲೆಯವರು ಇನ್ನೊಂದು ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಿ ನೇಮಕಗೊಳ್ಳುತ್ತಾರೆ. ಬಳಿಕ ತಮ್ಮ ಜಿಲ್ಲೆಗೆ ವರ್ಗಾವಣೆ ಮಾಡಿಸಿಕೊಳ್ಳುತ್ತಾರೆ. ಇದರಿಂದ ಕೆಲವು ಜಿಲ್ಲೆಗಳಲ್ಲಿ ಅದರಲ್ಲೂ ಮುಖ್ಯವಾಗಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಲೈನ್ಮೆನ್ಗಳ ಕೊರತೆಯಾಗುತ್ತದೆ. ಈ ಹಿನ್ನೆಲೆಯಲ್ಲಿ 2000 ಲೈನ್ಮೆನ್ಗಳನ್ನು ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಆಯಾ ಜಿಲ್ಲೆಯವರಿಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ರಾಜ್ಯಾದ್ಯಂತ ಏಕಕಾಲದಲ್ಲಿ ನೇಮಕ ಪ್ರಕ್ರಿಯೆ ನಡೆಸಲಾಗುವುದು ಎಂದರು.
ವಿದ್ಯುತ್ ಪೂರೈಕೆ ಕುರಿತ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಎಲ್ಲಾ ಎಸ್ಕಾಂ ವ್ಯವಸ್ಥಾಪಕ ನಿರ್ದೇಶಕರು, ಆಯಾ ಜಿಲ್ಲೆಯ ಎಸ್ಕಾಂ ಮುಖ್ಯ ಎಂಜಿನಿಯರ್ಗಳನ್ನು ಒಳಗೊಂಡಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ನಿರಂತರವಾಗಿ ಸಭೆ ನಡೆಸಬೇಕು ಎಂದು ಸೂಚಿಸಲಾಗಿದೆ. ಈ ಹಿಂದೆ ಸೂಚನೆ ನೀಡಿದ್ದರೂ ಕೆಲವರು ಸಭೆ ಕರೆದಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಈ ರೀತಿಯ ಸಭೆಗಳನ್ನು ತಪ್ಪದೆ ಕರೆಯುವಂತೆ ನಿರ್ದೇಶನ ನೀಡಲಾಗಿದೆ. ಅಲ್ಲದೆ, ಜಿಲ್ಲಾ ಮಟ್ಟದ ಕೆಡಿಪಿ ಸಭೆಗಳಿಗೆ ಕೆಪಿಟಿಸಿಎಲ್ ನಿಂದ ಒಬ್ಬ ಪ್ರತಿನಿಧಿಯನ್ನು ಕಡ್ಡಾಯವಾಗಿ ಕಳುಹಿಸುವಂತೆ ಸೂಚಿಸಲಾಗಿದೆ” ಎಂದು ತಿಳಿಸಿದರು.