ಬೆಂಗಳೂರು : ವಾಹನಗಳಿಗೆ ‘ HSRP’ ನಂಬರ್ ಪ್ಲೇಟ್ ಅಳವಡಿಸಲು ಮತ್ತೆ ಮೂರು ತಿಂಗಳು ಅವಧಿ ವಿಸ್ತರಣೆ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದರು. ಇದೀಗ ಮೇ.31 ರವರೆಗೆ ಅವಧಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಈ ಬಗ್ಗೆ ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಅವರು ಅಧಿಕೃತ ಆದೇಶವನ್ನು ಶುಕ್ರವಾರ ಹೊರಡಿಸಿದ್ದಾರೆ. ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ವಾಹನಗಳ ಸುರಕ್ಷತೆಗಾಗಿ ಈ ಪ್ಲೇಟ್ ಅಳವಡಿಕೆಯನ್ನ ಕಡ್ಡಾಯ ಮಾಡಲಾಗಿದೆ. ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್ಎಸ್ಆರ್ಪಿ) ಅಳವಡಿಸುವುದು ಕಡ್ಡಾಯವಾಗಿದೆ.
ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿ ಮಾಡಿಸಿದ್ದ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ (HSRP) ಅವಳಡಿಕೆ ಕಡ್ಡಾಯ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿತ್ತು. ಫೆಬ್ರವರಿ 17ರೊಳಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಡೆಡ್ ಲೈನ್ ನೀಡಿತ್ತು.