ಬೆಂಗಳೂರು : ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ಜನತೆಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ, ಹೀಗಾಗಿ ಲೋಡ್ ಶೆಡ್ಡಿಂಗ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದೆ ಇದ್ದ ಪರಿಸ್ಥಿತಿ ಇಲ್ಲ. ನಮ್ಮ ಬೇಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆ ಮಾಡಲು ಅವಕಾಶಗಳಿವೆ. ಲೋಡ್ ಶೆಡ್ಡಿಂಗ್ ಮಾಡಬಹುದಾದ ಪರಿಸ್ಥಿತಿ ಇನ್ನೂ ಉದ್ಭವಿಸಿಲ್ಲ. ಊಹಾಪೋಹಗಳಿಗೆ ಉತ್ತರ ನೀಡಲು ಆಗುವುದಿಲ್ಲ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಡ್ಯಾಂಗಳಲ್ಲಿ ನೀರು ಸಂಗ್ರಹವಾಗಿಲ್ಲ. ಇದರಿಂದ ಅಗ್ಗದ ದರದಲ್ಲಿ ವಿದ್ಯುತ್ ಉತ್ಪಾದನೆ ಸಾಧ್ಯವಾಗುತ್ತಿಲ್ಲ. ಇನ್ನೂ ಮಳೆ ಬರುವ ನಿರೀಕ್ಷೆ ಇದ್ದು, ಜಲಾಶಯಗಳ ಸ್ಥಿತಿ ಉತ್ತಮಗೊಳ್ಳುವ ಸಾಧ್ಯತೆ ಇದೆ ಎಂದರು.