ಬೆಂಗಳೂರು : ‘ದೈಹಿಕ ಶಿಕ್ಷಕ’ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎಂಬಂತೆ 2120 ಹುದ್ದೆಗಳ ಭರ್ತಿಗೆ ‘ರಾಜ್ಯ ಸರ್ಕಾರ’ ತೀರ್ಮಾನಿಸಿದೆ.
ಹೌದು, ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ‘ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಪ್ರಸ್ತುತ ಖಾಲಿ ಇರುವ ಪೈಕಿ 2120 ದೈಹಿಕ ಶಿಕ್ಷಣ ಶಿಕ್ಷಕರ ಭರ್ತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸಿದ್ದು, ಆ ಇಲಾಖೆಯ ಸಮಾಲೋಚನೆಯಲ್ಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಪದವೀಧರ ಕ್ಷೇತ್ರದ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಅವರು ಕೇಳಿದ ಪ್ರಶ್ನೆಗೆ ಸಚಿವ ಮಧು ಬಂಗಾರಪ್ಪ ಉತ್ತರ ನೀಡಿದರು. ರಾಜ್ಯದಲ್ಲಿ ಒಟ್ಟು 41913 ಪ್ರಾಥಮಿಕ ಶಾಲೆಗಳಿದ್ದು, ಅವುಗಳಲ್ಲಿ ಮಂಜೂರಾದ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು 6772 ಆಗಿದೆ. ಕಾರ್ಯನಿರತ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು 4127 ಆಗಿದೆ. ಇದರಲ್ಲಿ 2120 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದರು. ಪ್ರೌಢಶಾಲಾ ವಿಭಾಗಕ್ಕೆ ಸಂಬಂಧಪಟ್ಟಂತೆ ರಾಜ್ಯದಲ್ಲಿ 4844 ಸರ್ಕಾರಿ ಪ್ರೌಢ ಶಾಲೆಗಳು ಇವೆ. ಇದರಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಮಂಜೂರಾದ ಹುದ್ದೆ 5210 ಆಗಿದೆ ಎಂದರು.