ಬೆಂಗಳೂರು : ರಾಜ್ಯದ ಶಾಲಾ ಶಿಕ್ಷಣ ಇಲಾಖೆಯು ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸಂಭ್ರಮ ಶನಿವಾರ ಹೆಸರಿನಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್ ರಹಿತ ದಿನಾಚರಣೆಗೆ ಇಂದಿನಿಂದ ಚಾಲನೆ ಸಿಕ್ಕಿದೆ.
ರಾಜ್ಯದ ಶಾಲಾ ಮಕ್ಕಳಿಗೆ ಸಂತಸದಾಯಕ ಕಲಿಕೆಯನ್ನು ನೀಡಲು ಹಾಗೂ ಮಕ್ಕಳಿಗೆ ಪಠ್ಯವನ್ನು ಹೊರೆಯಾಗಿಸದೇ ಉಲ್ಲಾಸದಿಂದ ಕಲಿಯುವಂತೆ ಮಾಡುವ ಉದ್ದೇಶದಿಂದ ಪ್ರತಿ ತಿಂಗಳು ಮೂರನೇ ಶನಿವಾರದಂದು ಬ್ಯಾಗ್ ರಹಿತ ದಿನವೆಂದು ಆಚರಿಸುವಂತೆ ಆದೇಶಿಸಲಾಗಿದೆ.
2023-24 ನೇ ಸಾಲಿನಲ್ಲಿ ಪ್ರತಿ ತಿಂಗಳು 3 ನೇ ಶನಿವಾರ ಶಾಲಾ ಹಂತದಲ್ಲಿ ಸದರಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ತಿಳಿಸಲಾಗಿದ್ದು, ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆಯನ್ನು ಬೆಳೆಸಲು ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗಾಗಿ 10 ಸ್ವಯಂ ವಿವರಣಾತ್ಮಕ ಮಾಡ್ಯೂಲ್ ಗಳನ್ನು ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಗಳನ್ನು ಸಿದ್ದಪಡಿಸಲಾಗಿದೆ.
ಸಂಭ್ರಮ ಶನಿವಾರ ದಿನದಂದು ಜಿಲ್ಲಾ ಹಂತ ಮತ್ತು ಬ್ಲಾಕ್ ಹಂತದ ಎಲ್ಲಾ ಅಧಿಕಾರಿಗಳು ಹಾಗೂ ಸಿಆರ್ ಪಿಗಳು ಕಡ್ಡಾಯವಾಗಿ ಶಾಲೆಗಳಿಗೆ ಭೇಟಿ ನೀಡಿ ಅನುಪಾಲಿಸುವುದು ಹಾಗೂ ಅಗತ್ಯ ಮಾರ್ಗದರ್ಶನ ನೀಡುವುದು ಕಾರ್ಯಕ್ರಮದ ಯಶಸ್ಸಿಗೆ ಪಾಲ್ಗೊಳ್ಳಬೇಕು ಎಂದು ಸೂಚನೆ ನೀಡಿದೆ.