
ಶಿವಮೊಗ್ಗ : ಶಿಕ್ಷಣ ಮಂಡಳಿಯು ಮಕ್ಕಳಿಗೆ ಅವಕಾಶಗಳನ್ನು ನೀಡುವ ದೃಷ್ಠಿಯಿಂದ ಎಸ್‍ಎಸ್ ಎಲ್‍ಸಿ ವಾರ್ಷಿಕ ಪರೀಕ್ಷೆಯನ್ನು ಮೂರು ಪ್ರಯತ್ನಗಳಲ್ಲಿ ನಡೆಸಲು ತೀರ್ಮಾನಿಸಿದೆ. ಒಂದೇ ಬಾರಿ ಮಾತ್ರ ಪರೀಕ್ಷಾ ಶುಲ್ಕವನ್ನು ಪಾವತಿಸಿ 3 ಅವಕಾಶಗಳೊಂದಿಗೆ ಪರೀಕ್ಷೆಗಳನ್ನು ಬರೆಯಬಹುದಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ನಗರದ ಕುವೆಂಪು ರಂಗಮಂದಿರದಲ್ಲಿ ಪ್ರಿಯದರ್ಶಿನಿ ಆಂಗ್ಲ ಪ್ರೌಢಶಾಲೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಬದಲಾದ ಪರೀಕ್ಷಾ ಪದ್ಧತಿ ಕುರಿತಾದ ಶೈಕ್ಷಣಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣ ಮಂಡಳಿಯು ಮಕ್ಕಳಿಗೆ ಅವಕಾಶಗಳನ್ನು ನೀಡುವ ದೃಷ್ಠಿಯಿಂದ ಎಸ್‍ಎಸ್ ಎಲ್‍ಸಿ ವಾರ್ಷಿಕ ಪರೀಕ್ಷೆಯನ್ನು ಮೂರು ಪ್ರಯತ್ನಗಳಲ್ಲಿ ನಡೆಸಲು ತೀರ್ಮಾನಿಸಿದೆ. ಒಂದೇ ಬಾರಿ ಮಾತ್ರ ಪರೀಕ್ಷಾ ಶುಲ್ಕವನ್ನು ಪಾವತಿಸಿ 3 ಅವಕಾಶಗಳೊಂದಿಗೆ ಪರೀಕ್ಷೆಗಳನ್ನು ಬರೆಯಬಹುದಾಗಿದೆ. ಮೊದಲ ಪರೀಕ್ಷೆಯಲ್ಲಿಯೇ ಉತ್ತೀರ್ಣರಾದ ವಿದ್ಯಾರ್ಥಿಗಳು ಮುಂದಿನ ಎರಡು ಅವಕಾಶಗಳನ್ನು ಉಪಯೋಗಿಸಿಕೊಳ್ಳುವುದು ಅವರ ಐಚ್ಛಿಕ ವಿಷಯ. ಮೂರು ಪರೀಕ್ಷೆಗಳಲ್ಲಿ ಯಾವ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದಿರುತ್ತಾರೋ ಆ ಅಂಕವನ್ನು ಪರಿಗಣಿಸಲಾಗುತ್ತದೆ. ಮಕ್ಕಳ ಭವಿಷ್ಯವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಈ ಅವಕಾಶಗಳನ್ನು ಕಲ್ಪಿಸಲಾಗಿದೆ ಎಂದರು.
ಮಕ್ಕಳು ಯಾವುದೇ ಮಾಧ್ಯಮದಲ್ಲಿ ಓದುತ್ತಿದ್ದರೂ ಸಹ ಕಡ್ಡಾಯವಾಗಿ ಕನ್ನಡವನ್ನು ಓದಲೇಬೇಕು. ಶಿಕ್ಷಣವನ್ನು ಒಳ್ಳೆಯ ರೀತಿಯಲ್ಲಿ ತೆಗೆದುಕೊಂಡು ಹೋಗುವ ದೃಷ್ಠಿಯಿಂದ ಮುಂದಿನ ವರ್ಷದಲ್ಲಿ ರಾಜ್ಯದಲ್ಲಿ 500 ರಿಂದ 600 ಕೆಪಿಎಸ್ ಶಾಲೆಗಳನ್ನು ತೆರೆಯಲು ನಿರ್ಧರಿಸಿದೆ. ಈ ಬಾರಿ 43 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದು, 13 ಸಾವಿರ ಖಾಯಂ ಶಿಕ್ಷಕರನ್ನು ನೇಮಕ ಮಾಡಲಾಗಿದ್ದು, ಶಾಲೆಗಳಲ್ಲಿನ ಸಮಸ್ಯೆ ಪರಿಹಾರಕ್ಕೆ ನಿಮ್ಮ ಸಹಕಾರ ನನಗೆ ಅಗತ್ಯ ಎಂದು ಹೇಳಿದರು.