
ಮಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 13,500 ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 13,500 ಶಿಕ್ಷಕರ ನೇಮಕಾತಿಯನ್ನು ಶೀಘ್ರದಲ್ಲೇ ಮಾಡಲಾಗುವುದು. ನೇಮಕಾತಿ ವಿಚಾರ ಕೋರ್ಟ್ ನಲ್ಲಿ ಇರುವುದರಿಂದ ಶಿಕ್ಷಕರ ನೇಮಕಾತಿ ವಿಳಂಬವಾಗುತ್ತಿದೆ. ಕೋರ್ಟ್ ನಲ್ಲಿ ಇತ್ಯರ್ಥವಾದ ಬಳಿಕ 13,500 ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ತಿಳಿಸಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ತುರ್ತಾಗಿ ಪಠ್ಯಪುಸ್ತಕದಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದ್ದು, ಮುಂದಿನ ಶೈಕ್ಷಣಿಕ ಸಾಲಿನಲ್ಲಿ ತಜ್ಞರ ಸಮಿತಿ ಮೂಲಕ ಪೂರ್ಣವಾಗಿ ಪಠ್ಯಪರಿಷ್ಕರಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಪಠ್ಯದಲ್ಲಿ ಬದಲಾವಣೆ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಹೇಳಿದ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆ ಪಡೆದು ಅವರ ಸಹಕಾರದಿಂದ ಪಠ್ಯಪರಿಷ್ಕರಣೆ ನಡೆಸಲಾಗುತ್ತದೆ. ಮಕ್ಕಳಿಗೆ ಉತ್ತಮ ತಿಳಿವಳಿಕೆಯ ಪಠ್ಯ ಇರಬೇಕೆಂಬ ಉದ್ದೇಶದಿಂದ ಪಠ್ಯಪುರಿಷ್ಕರಣೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.