ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್…ಶೀಘ್ರವೇ ರಾಜ್ಯದಲ್ಲಿ 20 ಸಾವಿರ `ಶಿಕ್ಷಕ’ರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಇನ್ನೂ 20 ಸಾವಿರ ಶಿಕ್ಷಕರ ನೇಮಕಕ್ಕೆ ಮುಖ್ಯಮಂತ್ರಿ ಅವರ ಬಳಿ ಚರ್ಚಿಸಲಾಗಿದೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ , ಶೀಘ್ರವೇ ಅರ್ಜಿ ಆಹ್ವಾನಿಸಲಾಗುತ್ತದೆ ಎಂದು ಹೇಳಿದ್ದಾರೆ.
13,500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ನ್ಯಾಯಾಲಯದಲ್ಲಿ ಪ್ರಕರಣ ಬಾಕಿ ಇರುವ ಅಂದಾಜು 400 ರಿಂದ 500 ಹುದ್ದೆಗಳ ನೇಮಕಾತಿ ಮಾತ್ರ ತಡವಾಗಿದೆ. ಇದು ಶೀಘ್ರದಲ್ಲೇ ಇತ್ಯರ್ಥವಾಗುತ್ತೆ, ಉಳಿದ 13 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ ಸ್ಥಳ ನಿಯುಕ್ತಿಗೊಳಿಸಲಾಗುವುದು ಎಂದು ಸಚಿವರು ಹೇಳಿದರು.
ಮಳೆಯಿಂದ ಶಿಥಿಲಗೊಂಡ ಶಾಲಾ ಕಟ್ಟಡಗಳಿಗೆ ಮೂಲಸೌಭ್ಯ ಒದಗಿಸುವ ಕೆಲಸವೂ ನಡೆಯುತ್ತಿದೆ. 7,311 ಹೊಸ ಕೊಠಡಿಗಳ ನಿರ್ಮಾಣ, 3,593 ಶಾಲೆಗಳಲ್ಲಿ ದುರಸ್ತಿ, 7,100 ಶೌಚಾಲಯಗಳನ್ನು ಸುಮಾರು ₹1 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ನರೇಗಾ ಯೋಜನೆಯಲ್ಲಿ ಶಾಲೆಗಳ ಕಾಂಪೌಂಡ್, ಅಡುಗೆ ಕೋಣೆ, ಶೌಚಾಲಯಗಳ ನಿರ್ಮಾಣ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.