alex Certify BIG NEWS : ರಾಜ್ಯದ ರೈತರಿಗೆ ‘ನೆಮ್ಮದಿ ಸುದ್ದಿ’ ; ಬರ ಪರಿಹಾರದ ಮೊತ್ತ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಸಿಎಂ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದ ರೈತರಿಗೆ ‘ನೆಮ್ಮದಿ ಸುದ್ದಿ’ ; ಬರ ಪರಿಹಾರದ ಮೊತ್ತ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ರೈತರಿಗೆ ನೆಮ್ಮದಿ ಸುದ್ದಿ ಎಂಬಂತೆ ಬರ ಪರಿಹಾರದ ಮೊತ್ತ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು. ಈ ವರ್ಷದ ಸಾಲ ಯೋಜನೆ ಕಳುಹಿಸಲಾಗಿದೆ. ಜಿಲ್ಲಾ ಬ್ಯಾಂಕರುಗಳೊಂದಿಗೆ ಸಮನ್ವಯ ವಹಿಸಿ, ಕ್ರಮ ಕೈಗೊಳ್ಳಬೇಕು. ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಬೆಳೆ ವಿಮೆ ಕ್ಲೇಮ್ ಮಾಡುವ ಸಂದರ್ಭದಲ್ಲಿ ಕಂಪೆನಿಗಳ ಸ್ಯಾಂಪಲ್ ಪರಿಶೀಲನೆಯ ಕುರಿತು ರೈತರು ಹಲವು ಸಂದೇಹಗಳನ್ನು ಹೊಂದಿದ್ದಾರೆ. ವಿಮಾ ಕಂಪನಿಗಳ ನಡವಳಿಕೆಯಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಅಪಾಯವಿದೆ. ಆದ್ದರಿಂದ ಈ ಕುರಿತು ಮುಂಚಿತವಾಗಿಯೇ ಕಂಪೆನಿಗಳೊಂದಿಗೆ ಚರ್ಚಿಸಿ, ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಮೈಸೂರಿನ ಎರಡು ಹಳ್ಳಿಗಳಲ್ಲಿ ಕಾಲರಾ ತಲೆದೋರಿದೆ. ಟಿ. ನರಸೀಪುರ ತಾಲ್ಲೂಕು ತಗಡೂರು ಹಾಗೂ ಕೆ.ಸಾಲುಹುಂಡಿ ಗ್ರಾಮಗಳಲ್ಲಿ ಕಾಲರಾ ಕಂಡುಬಂದಿದೆ. ಕಲುಷಿತ ನೀರು ಕುಡಿದು ಕಾಲರಾ ಉಂಟಾಗಿದೆ. ಸಂಬಂಧಪಟ್ಟ ಎಂಜಿನಿಯರುಗಳು ಕುಡಿಯಲು ಯೋಗ್ಯ ನೀರು ಒದಗಿಸುವಲ್ಲಿ ವಿಫಲವಾಗಿದ್ದಾರೆ. ಕುಡಿಯುವ ನೀರಿನ ಮೂಲ ಕುಡಿಯಲು ಯೋಗ್ಯವಾಗಿದೆಯೇ ಇಲ್ಲವೇ ಎಂದು ಪರಿಶೀಲಿಸದೆ ಇರುವುದು ದೊಡ್ಡ ಅಪರಾಧ. ಕೆ. ಸಾಲುಹುಂಡಿಯಲ್ಲಿ 40 ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿ, ಒಬ್ಬ ಯುವಕ ಮೃತಪಟ್ಟಿದ್ದಾನೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಆಗಿರುವುದು. ಕಾಲರಾ ಅಥವಾ ಇನ್ನಿತರ ಸಾಂಕ್ರಾಮಿಕಗಳು ಕಾಣಿಸಿಕೊಂಡರೆ ಹಿರಿಯ ಅಧಿಕಾರಿಗಳನ್ನೇ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಫೆಬ್ರವರಿಯಲ್ಲಿ ಬಜೆಟ್ ಮಂಡಿಸಲಾಗಿದೆ. ಆರ್ಥಿಕ ವರ್ಷದ ಎರಡು ತಿಂಗಳು ಕಳೆದು ಹೋಗುತ್ತಿದೆ. ಒಂದು ವರ್ಷದಲ್ಲಿ ಮಾಡುವ ಕೆಲಸವನ್ನು 10 ತಿಂಗಳಲ್ಲಿ ಮಾಡಿ ಮುಗಿಸುವ ಅನಿವಾರ್ಯತೆ ಇದೆ. ಈ ಹಿನ್ನೆಲೆಯಲ್ಲಿ ಎಲ್ಲ ಕಾರ್ಯದರ್ಶಿಗಳ ಸಭೆ ನಡೆಸಲಾಯಿತು. ಜೂನ್ ಕೊನೆಯ ವರೆಗೆ ಎಲ್ಲ ಹೊಸ ಘೋಷಣೆಗಳಿಗೆ ಸರ್ಕಾರಿ ಆದೇಶ ಹೊರಡಿಸಬೇಕು ಎಂದು ಸೂಚಿಸಲಾಗಿದೆ. ಟೆಂಡರ್ ಕರೆಯಲು ಯಾವುದೇ ನೀತಿ ಸಂಹಿತೆ ಅಡ್ಡ ಬರುವುದಿಲ್ಲ. ಟೆಂಡರ್ ಕರೆದು, ಅಂತಿಮಗೊಳಿಸಿ, ಕಾರ್ಯಾದೇಶ ನೀಡಲು ಪ್ರಯತ್ನಿಸಬೇಕು. ಇದರಲ್ಲಿ ವಿಳಂಬವಾದರೆ ರಾಜ್ಯದ ಅಭಿವೃದ್ಧಿಯಲ್ಲಿ ವಿಳಂಬವಾಗುತ್ತದೆ. 500 ಕ್ಕೂ ಹೆಚ್ಚು ಘೋಷಣೆಗಳನ್ನು ಮಾಡಲಾಗಿದೆ. ಈ ಬಗ್ಗೆ ಎಲ್ಲ ಅಧಿಕಾರಿಗಳು ಹೆಚ್ಚು ಗಮನ ಹರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದೆ. ಈ ಬಾರಿ ನೀತಿ ಸಂಹಿತೆ ಅನುಷ್ಠಾನದ ಅವಧಿ ಸುದೀರ್ಘವಾಗಿತ್ತು. ಸರ್ಕಾರದ ಆಡಳಿತವನ್ನು ನಿಧಾನವಾಗಿಸಿತ್ತು. ಎಲ್ಲ ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳಾಗಿದ್ದರು. ಚುನಾವಣಾ ಕೆಲಸದಲ್ಲಿ ನಿರತರಾಗಿದ್ದರಿಂದ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಲು ಸಾಧ್ಯವಾಗಿರಲಿಲ್ಲ. ವಾಡಿಕೆಗಿಂತ ಹೆಚ್ಚು ಮಳೆ ಮೇ ತಿಂಗಳಲ್ಲಿ ಆಗಿದೆ. ಬಿತ್ತನೆ ಕೆಲಸವೂ ಪ್ರಾರಂಭವಾಗಿದೆ. ಮೇ ತಿಂಗಳಲ್ಲಿ 2.95 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಇತ್ತು, 68,000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಇನ್ನೂ 13 ದಿನ ಬಾಕಿಯಿದೆ. ಜೂನ್ 6 ರ ವರೆಗೆ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಕಾರಣದಿಂದ ತುರ್ತು ಕೆಲಸಗಳಿಗೆ ಗಮನ ಕೊಡಬೇಕು. ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಲು ಪ್ರಾರಂಭಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...