ಬೆಂಗಳೂರು : ರಾಜ್ಯದ ಜನತೆಗೆ ಗುಡ್ ನ್ಯೂಸ್ , ಸರ್ಕಾರಿ ಇನ್ಮುಂದೆ ಆಸ್ಪತ್ರೆಗಳಲ್ಲಿ ರೋಬೊಟಿಕ್ ತಂತ್ರಜ್ಞಾನ ಅಳವಡಿಕೆ ಮಾಡಲಾಗುತ್ತದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ ಜನರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಅತ್ಯಾಧುನಿಕ ಸೌಲಭ್ಯ ಸಿಗುವಂತಾಗಬೇಕು. ಹೀಗಾಗಿ ರೋಬೊಟಿಕ್ ತಂತ್ರಜ್ಞಾನವನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಅಳವಡಿಸಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಹೃದಯ ಸಂಬಂಧಿತ ಸಮಸ್ಯೆಗಳಿಗೆ ಆಂಜಿಯೋಗ್ರಾಮ್ ಮತ್ತು ಆಂಜಿಯೋಪ್ಲಾಸ್ಟಿಯನ್ನು ಸಕಾಲದಲ್ಲಿ ಮಾಡಬೇಕಿರುವುದರಿಂದ ಕೆ.ಸಿ. ಜನರಲ್ ಆಸ್ಪತ್ರೆ ಆವರಣದಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆಯ ಘಟಕದಲ್ಲಿ 24 ಗಂಟೆಯೂ ಸೇವೆ ಒದಗಿಸುವಂತೆ ಸಂಸ್ಥೆಯ ನಿರ್ದೇಶಕರಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಹಾಗೂ ವೈದ್ಯಕೀಯ ಕಾಲೇಜುಗಳು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ನುರಿತ ಭದ್ರತಾ ಸಿಬ್ಬಂದಿ ನಿಯೋಜನೆ, ಸಿಸಿಟಿವಿ ಕ್ಯಾಮರಾಗಳ ಸಂಖ್ಯೆ ಹೆಚ್ಚಳ ಸೇರಿ ವಿವಿಧ ಕ್ರಮಗಳ ಮೂಲಕ ಮಹಿಳಾ ವೈದ್ಯರಿಗೆ ಅಗತ್ಯ ಸುರಕ್ಷತೆ ಒದಗಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.