
ಮಳೆ ಇಲ್ಲದೆ ಬರ ಹಾಗೂ ಕುಡಿಯಲು ನೀರಿಲ್ಲದೆ ತತ್ತರಿಸಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್ ಇಲ್ಲಿದೆ. ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದ್ದು, ಮತ್ತೆ ಇಂದಿನಿಂದ ಆರು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 13 ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೀದರ್, ಬೆಳಗಾವಿ, ಕಲಬುರಗಿ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಜೋರು ಮಳೆ ಆಗಲಿದೆ ಎಂದು ತಿಳಿಸಲಾಗಿದೆ.
ಈ ಪೈಕಿ ಶಿವಮೊಗ್ಗ, ಕೊಡಗು, ಬಾಗಲಕೋಟೆ, ಧಾರವಾಡ, ಗದಗ, ವಿಜಯಪುರ, ಹಾವೇರಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ‘ಯಲ್ಲೋ ಅಲರ್ಟ್’ ಘೋಷಿಸಲಾಗಿದ್ದು, ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಇನ್ನು ಏಪ್ರಿಲ್ 14ರಿಂದ ಮೂರು ದಿನಗಳ ಕಾಲ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉಷ್ಣಾಂಶ ಏರಿಕೆಯಾಗಲಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.