ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸುವ ಕುರಿತು ಅಧಿಕಾರಿಗಳ ಜತೆ ಚರ್ಚೆ ಮಾಡುವುದಾಗಿ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ವೇಗವಾಗಿ ಬೆಳೆಯುತ್ತಿರುವ ಮತ್ತು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರು ಮಹಾನಗರದ ಮುಂಬರುವ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಮೂಲಸೌಕರ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಗುರುವಾರ ಪ್ರಾಥಮಿಕ ಹಂತದ ಚರ್ಚೆ ನಡೆಸಿದೆ ಎಂದು ಹೇಳಿದರು.
ಸಭೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎನ್. ಮಂಜುಳಾ, ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ಸಿ.ಸತೀಶ, ಕಾರ್ಯನಿರ್ವಾಹಕ ನಿರ್ದೇಶಕರಾದ ಡಿ.ಪಿ.ಪ್ರಕಾಶ ಮತ್ತಿತರರು ಭಾಗವಹಿಸಿದ್ದರು. ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಸಾಧ್ಯಾಸಾಧ್ಯತೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.