![](https://kannadadunia.com/wp-content/uploads/2022/04/Breast-cancer-stage-diagnosis.jpg)
ನವದೆಹಲಿ: ಮಹಿಳೆಯರನ್ನು ಕಾಡುವ ಕ್ಯಾನ್ಸರ್ ವಿರುದ್ಧ ಲಸಿಕೆ ಅಸ್ತ್ರ ಪ್ರಯೋಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಮಹಿಳೆಯರಲ್ಲಿ ವಿವಿಧ ಬಗೆಯ ಕ್ಯಾನ್ಸರ್ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ 9 ರಿಂದ 16 ವರ್ಷದ ಹೆಣ್ಣು ಮಕ್ಕಳಿಗೆ ಕ್ಯಾನ್ಸರ್ ಪ್ರತಿರೋಧದ ಲಸಿಕೆ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಐದಾರು ತಿಂಗಳಲ್ಲಿ ಇದು ಲಭ್ಯವಾಗಲಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಹಾಯಕ ಸಚಿವ ಪ್ರತಾಪ್ ರಾವ್ ಜಾಧವ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಸಿಕೆ ಸಂಶೋಧನೆ ಬಹುತೇಕ ಮುಗಿದಿದ್ದು, ಈಗಾಗಲೇ ಪ್ರಾಯೋಗಿಕ ಪರೀಕ್ಷೆಗಳು ನಡೆಯುತ್ತಿವೆ. ಐದಾರು ತಿಂಗಳಲ್ಲಿ ಲಸಿಕೆ ಲಭ್ಯವಾಗಲಿದೆ ಎಂದು ಹೇಳಿದ್ದಾರೆ.
9 ರಿಂದ 16 ವರ್ಷದ ಹೆಣ್ಣು ಮಕ್ಕಳು ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ. 30 ವರ್ಷ ದಾಟಿದ ಮಹಿಳೆಯರಿಗೆ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಪರೀಕ್ಷೆ ವ್ಯವಸ್ಥೆ ಮಾಡಲಾಗುವುದು. ಕ್ಯಾನ್ಸರ್ ಕಾಯಿಲೆ ತ್ವರಿತ ಪತ್ತೆಗಾಗಿ ಡೇಕೇರ್ ಸೆಂಟರ್ ಗಳನ್ನು ತೆರೆಯಲಾಗುವುದು ಎಂದರು.
ದೇಶದಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಇದನ್ನು ತಡೆಯುವ ಉದ್ದೇಶದಿಂದ ಕ್ರಮ ಕೈಗೊಳ್ಳಲಾಗಿದೆ. ಕ್ಯಾನ್ಸರ್ ಚಿಕಿತ್ಸೆ ವೆಚ್ಚ ಕಡಿಮೆ ಮಾಡಲು ಕ್ಯಾನ್ಸರ್ ಗೆ ಬಳಸುವ ಔಷಧಗಳ ಮೇಲಿನ ಆಮದು ಸುಂಕವನ್ನು ಸಂಪೂರ್ಣವಾಗಿ ರದ್ದು ಮಾಡಲಾಗಿದೆ ಎಂದು ತಿಳಿಸಿದ್ದಾರೆ.