ಬೆಂಗಳೂರು : ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಯಾವುದೇ ರೀತಿ ತೊಂದರೆಯಾಗದಂತೆ ಖಾಲಿ ಇರುವ 247 ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇಮಕಾತಿಗೆ ಅಗತ್ಯ ಕ್ರಮ ವಹಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದರು.
ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಕುಣಿಗಲ್ ಕ್ಷೇತ್ರದ ಸದಸ್ಯ ಡಾ. ಹೆಚ್.ಡಿ.ರಂಗನಾಥ ಇವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 247 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇಮಕಾತಿಗೆ ಈಗಾಗಲೇ 14-03-2024ರಂದು ಕರ್ನಾಟಕ ಲೋಕ ಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಕರ್ನಾಟಕ ಲೋಕ ಸೇವಾ ಆಯೋಗದಿಂದ 15-3-2024ರಂದು ಅಧಿಸೂಚನೆ ಪ್ರಕಟಿಸಲಾಗಿದೆ.
ದಿನಾಂಕ: 16-11-2024 ಮತ್ತು 17-01-2025ರಂದು ಕಲ್ಯಾಣ ಕರ್ನಾಟಕ ವೃಂದದ 97 ಹುದ್ದೆಗಳಿಗೆ ಪರೀಕ್ಷೆಯನ್ನು ನಡೆಸಲಾಗಿರುತ್ತದೆ. ಉಳಿಕೆ ಮೂಲ ವೃಂದದ 150 ಹುದ್ದೆಗಳಿಗೆ ದಿನಾಂಕ: 07-12-2024 ಮತ್ತು 08-12-2024ರಂದು ಪರೀಕ್ಷೆ ನಡೆಸಲಾಗಿರುತ್ತದೆ.
ನೇರ ನೇಮಕಾತಿ ಕೋಟಾದಡಿ ಖಾಲಿ ಇರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ವಹಿಸಿದ್ದು ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ ಎಂದು ತಿಳಿಸಿದರು.